ಜಿಲ್ಲೆ

ರಸ್ತೆ ಅಭಿವೃದ್ಧಿಗೆ 10 ಲಕ್ಷ ರೂ. ಅನುದಾನ

ಜಿ.ಹೆಚ್. ಧನ್ಯಕುಮಾರ್

ತರೀಕೆರೆ: ಬೇಲೇನಹಳ್ಳಿ ತಾಂಡದಿಂದ ಪಿರಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆವರೆಗಿನ ರಸ್ತೆ ಅಭಿವೃದ್ಧಿಗೆ 10 ಲಕ್ಷ ರೂ . ಅನುದಾನ ನೀಡಲಾಗಿದ್ದು, ಮಳೆ ಕಡಿಮೆಯಾದ ಕೂಡಲೇ ಕಾಮಗಾರಿ ಆರಂಭಿಸಲಾಗುವುದು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಪಿರಮೇನಹಳ್ಳಿ ಗ್ರಾಮದಲ್ಲಿ ಎನ್‌ಆರ್‌ಐಜಿ ಯೋಜನೆಯ 5 ಲಕ್ಷ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ 7 ಲಕ್ಷ ರೂ. ಸೇರಿ ಒಟ್ಟು 12 ಲಕ್ಷ ರೂ. ಅನುದಾನದಲ್ಲಿ ನಿರ್ಮಿಸಿರುವ ನೂತನ ಅಂಗನವಾಡಿ ಕಟ್ಟಡವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.
ಸರ್ಕಾರ ಅಂಗನವಾಡಿ ಕೇಂದ್ರಗಳ ಮೂಲಕ ಪೌಷ್ಟಿಕ ಆಹಾರ ವಿತರಿಸುತ್ತಿರುವುದರಿಂದ ತಾಯಿ ಮತ್ತು ಶಿಶುಗಳ ಮರಣ ಪ್ರಮಾಣ ಕಡಿಮೆಯಾಗಿದೆ. ಪಾಲಕರಲ್ಲಿ ಆಂಗ್ಲ ಭಾಷಾ ವ್ಯಾಮೋಹ ಹೆಚ್ಚುತ್ತಿರುವುದರಿಂದ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ದಾಖಲೆ ಸಂಖ್ಯೆ ಕ್ಷೀಣಿಸುತ್ತಿದೆ. ಪಾಲಕರು ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ ಸೇರಿಸಿ ಸರ್ಕಾರದಿಂದ ನೀಡುವ ಸೌಲಭ್ಯಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಪಿರಮೇನಹಳ್ಳಿ ಗ್ರಾಮದಲ್ಲಿ ಹೈ ಮಾಸ್ಟ್ ದೀಪ ಅಳವಡಿಕೆಗೆ 3 ಲಕ್ಷ ರೂ. ಅನುದಾನ ನೀಡಲಾಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಶಿಥಿಲಾವಸ್ಥೆಗೆ ತಲುಪಿರುವ ಬಸ್ ತಂಗುದಾಣ ನಿರ್ಮಾಣಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಿಸಿಕೊಡಲಾಗುವುದು ಎಂದು ಭರವಸೆ ನೀಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹಾಂತೇಶ್ ಭಜಂತ್ರಿ ಮಾತನಾಡಿ, ಜಿಲ್ಲೆಯ ಬಹುತೇಕ ಅಂಗನವಾಡಿ ಕೇಂದ್ರಗಳು ಸ್ವಂತ ಕಟ್ಟಡ ಹೊಂದಿದ್ದು, ಅಲ್ಲಿ ಕುಡಿಯುವ ನೀರು, ವಿದ್ಯುತ್ ಸೇರಿ ಎಲ್ಲ ರೀತಿಯ ಮೂಲಭೂತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಗ್ರಾಪಂ ಅಧ್ಯಕ್ಷ ಇ.ಟಿ.ಕಾಂತಕುಮಾರ್‌ನಾಯ್ಕ, ಉಪಾಧ್ಯಕ್ಷೆ ಡಿ.ಸಿ.ಶ್ರುತಿ, ಸಿಡಿಪಿಒ ಎನ್.ಚರಣ್‌ರಾಜ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮಿರ್ಜಾ ಇಸ್ಮಾಯಿಲ್, ಪಿಡಿಒ ಎಲ್.ಆರ್.ಈಶ್ವರಯ್ಯ, ಅಂಗನವಾಡಿ ಮೇಲ್ವಿಚಾರಕಿ ಸುನಿತಾ, ಗ್ರಾಮಸ್ಥರಾದ ಆರ್.ಬಸಪ್ಪನಾಯ್ಕ, ಭಗ್ಯಾನಾಯ್ಕ ಮತ್ತಿತರರಿದ್ದರು.