ಜಿಲ್ಲೆ

11ರಂದು ಮದ್ದೂರಿನಲ್ಲಿ ಪ್ರಜಾಧ್ವನಿ ಕಾರ್ಯಕ್ರಮ

ಮದ್ದೂರು: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಫೆ.11 ರಂದು ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಕಾರ್ಯಕ್ರಮ ನಡೆಯಲಿದ್ದು ತಾಲೂಕಿನಾದ್ಯಂತ 20 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿಲಿದ್ದಾರೆ ಎಂದು ಕಾಂಗ್ರೆಸ್ ಸಂಭವನೀಯ ಅಭ್ಯರ್ಥಿ ಎಸ್.ಗುರುಚರಣ್ ತಿಳಿಸಿದರು.


ಪಟ್ಟಣದ ತಾಲೂಕು ಕ್ರೀಡಾಂಗಣದ ಕಾರ್ಯಕ್ರಮ ನಡೆಯುವ ಸ್ಥಳ ಪರಿಶೀಲನೆ ನಡೆಸಿ ಗುರುವಾರ ಮಾತನಾಡಿದ ಅವರು, ಫೆ.11ರಂದು 2ನೇ ಹಂತದ ಪ್ರಜಾಧ್ವನಿ ಕಾರ್ಯಕ್ರಮ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯಲಿದೆ. ಪಟ್ಟಣದ ಉಗ್ರ ನರಸಿಂಹಸ್ವಾಮಿ ದೇವಸ್ಥಾನದಿಂದ ಗಣ್ಯರನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ವೇದಿಕೆಗೆ ಕರೆತರಲಾಗುವುದು. ಕಾರ್ಯಕ್ರಮವನ್ನು ಬೆಳಗ್ಗೆ 11 ಗಂಟೆಗೆ ಡಿ.ಕೆ.ಶಿವಕುಮಾರ್ ಉದ್ಘಾಟಿಸಲಿದ್ದಾರೆ ಎಂದರು.


ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮಾತನಾಡಿ, ಪ್ರಜಾಧ್ವನಿ ಕಾರ್ಯಕ್ರಮಕ್ಕೆ ಡಿ.ಕೆ. ಶಿವಕುಮಾರ್ ನೇತೃತ್ವದ ತಂಡ ಜಿಲ್ಲೆಗೆ ಆಗಮಿಸಲಿದ್ದು, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಪಕ್ಷದ ನಾಯಕರಾದ ಕೆ.ಎಚ್.ಮುನಿಯಪ್ಪ, ಧ್ರುವನಾರಾಯಣ, ಕರ್ನಾಟಕದ ಉಸ್ತುವಾರಿ ರೋಜಿಜಾನ್, ಚಲುವರಾಯಸ್ವಾಮಿ, ನರೇಂದ್ರಸ್ವಾಮಿ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ ಎಂದರು.
ಡಿ.ಕೆ.ಶಿವಕುಮಾರ್ ಮತ್ತುಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಲೂಕಿನಿಂದ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಎಸ್.ಗುರುಚರಣ್ ಎಂದು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಈ ವಿಷಯದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದರು.


ರಾಜ್ಯ ಬಜೆಟ್‌ನಲ್ಲಿ ಮೈಷುಗರ್‌ಗೆ ಘೋಷಿಸಿದ ಹಣದಲ್ಲಿ 20 ಕೋಟಿ ರೂ. ಬಾಕಿ ಉಳಿಸಿದೆ. 100 ಕೋಟಿ ರೂ. ಮೀಸಲಿಡಲು ಮತ್ತು ಮೈಸೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಡ್ಯ ಅಥವಾ ಮದ್ದೂರು ನಡುವೆ ಟ್ರಾಮಾ ಕೇರ್ ಸೆಂಟರ್ ಸ್ಥಾಪಿಸಲು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಿಎಂಗೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.


ವಿಧಾನಪರಿಷತ್ ಸದಸ್ಯ ಮಧು ಜಿ.ಮಾದೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೇಶಹಳ್ಳಿ ಮೋಹನ್ ಕುಮಾರ್, ಮುಖಂಡರಾದ ಹೊಂಬಯ್ಯ, ಎಂ.ಪಿ.ಅಮರ್‌ಬಾಬು, ಸಿದ್ದು, ಪ್ರಶಾಂತ್, ಮಹೇಶ್ ಇದ್ದರು.