ಚನ್ನರಾಯಪಟ್ಟಣ: ಪಟ್ಟಣದಲ್ಲಿ ಜನವಸತಿ ಪ್ರದೇಶ ವಿಸ್ತಾರವಾಗಿ ಬೆಳೆಯುತ್ತಿದ್ದು, ವಾಹನ ದಟ್ಟಣೆ ಹಾಗೂ ಜನದಟ್ಟಣೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಲು ಸಿಸಿ ಕ್ಯಾಮರಾಗಳು ಅತ್ಯವಶ್ಯಕ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
ಪಟ್ಟಣದ ನಗರ ಪೊಲೀಸ್ ಠಾಣೆಯ ನಿಯಂತ್ರಣ ಕೊಠಡಿಯಿಂದ ಪಟ್ಟಣದ ವಿವಿಧ ಸ್ಥಳಗಳಲ್ಲಿ 14 ಲಕ್ಷ ರೂ.ವೆಚ್ಚದಲ್ಲಿ ಅಳವಡಿಸಲಾದ 32 ಸಿಸಿ ಟಿವಿ ಕ್ಯಾಮರಾಗಳನ್ನು ಉದ್ಘಾಟಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಬೈಕ್ ಕಳ್ಳತನ, ಸಣ್ಣಪುಟ್ಟ ಗಲಾಟೆ, ಘರ್ಷಣೆಗಳು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಪಟ್ಟಣದ 12 ವೃತ್ತಗಳಲ್ಲಿ 32 ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಎರಡನೇ ಹಂತದಲ್ಲಿ ಪಟ್ಟಣದ ಪ್ರವೇಶ ದ್ವಾರ ಹಾಗೂ ನಿರ್ಗಮನ ದ್ವಾರದಲ್ಲಿ ವಾಹನ ನೋಂದಣಿ ನಂಬರ್ ಪತ್ತೆ ಹಚ್ಚುವ ವ್ಯವಸ್ಥೆ ಇರುವ 4 ಕ್ಯಾಮರಾಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.
ಪಟ್ಟಣದಾದ್ಯಂತ ಪ್ರಮುಖ ರಸ್ತೆ, ವೃತ್ತಗಳು ಸಿಸಿಟಿವಿ ಕಣ್ಗಾವಲಿನಲ್ಲಿ ಇರುವುದರಿಂದ ಸಾರ್ವಜನಿಕರು ಯಾವುದೇ ರೀತಿಯ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಬಾರದು. ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಎಲ್ಲ ದೃಶ್ಯಗಳು ಪೊಲೀಸ್ ಠಾಣೆಯಲ್ಲಿ ನೇರ ಪ್ರಸಾರವಾಗುವುದರಿಂದ ಸಾರ್ವಜನಿಕರು ಯಾವುದೇ ರೀತಿಯ ಅಪರಾಧ ಪ್ರಕರಣಗಳು, ಅಪಘಾತಗಳು ಸಂಭವಿಸಿದ್ದಲ್ಲಿ ನೇರವಾಗಿ ಪೊಲೀಸ್ ಠಾಣೆಗೆ ಬಂದು ದೃಶ್ಯಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲು ಅನುಕೂಲವಾಗುತ್ತದೆ ಎಂದರು.
ಚನ್ನರಾಯಪಟ್ಟಣ ಡಿವೈಎಸ್ಪಿ ರವಿಪ್ರಸಾದ್ ಮಾತನಾಡಿದರು. ಸಿಪಿಐ ರವಿ, ಪುರಸಭಾ ಅಧ್ಯಕ್ಷೆ ರೇಖಾ ಅನಿಲ್, ಉಪಾಧ್ಯಕ್ಷೆ ಲಕ್ಷ್ಮೀ ವೆಂಕಟೇಶ್, ಸದಸ್ಯರಾದ ರಾಣಿಕೃಷ್ಣ, ಕವಿತಾ, ಗಣೇಶ್, ಬನಶಂಕರಿ ರಘು, ಸುರೇಶ್, ಪುರಸಭಾ ಮುಖ್ಯಾಧಿಕಾರಿ ಹೇಮಂತ್, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಹಾಡೇನಹಳ್ಳಿ ಲೋಕೇಶ್, ಸಿ.ಟಿ. ಅಶೋಕ್ ಕುಮಾರ್, ನಂಜುಂಡ ಮೈಮ್ ಉಪಸ್ಥಿತರಿದ್ದರು.