ಜಿಲ್ಲೆ

12ರಿಂದ ಆಶಾ ಕಾರ್ಯಕತೆರ್ಯರ ಅಹೋರಾತ್ರಿ ಧರಣಿ

ಚಾಮರಾಜನಗರ : ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಹೆಚ್ಚಳ ಮಾಡಬೇಕು ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆ.12ರಿಂದ 14 ರವರೆಗೆ ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಉಪಾಧ್ಯಕ್ಷೆ ಎಂ.ಉಮಾದೇವಿ ತಿಳಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜ.7 ರಿಂದ ರಾಜ್ಯಮಟ್ಟದ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲಾಗುವುದೆಂದು ಭರವಸೆ ನೀಡಿದ ಪರಿಣಾಮ ಜ.10 ರಂದು ಪ್ರತಿಭಟನೆಯನ್ನು ಕೈಬಿಡಲಾಗಿತ್ತು. ಆದರೆ ಈವರೆಗೂ ಬೇಡಿಕೆಗಳನ್ನು ಈಡೇರಿಸದ ಹಿನ್ನೆಲೆಯಲ್ಲಿ ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಆಶಾ ಕಾರ್ಯಕರ್ತೆಯರಿಗೆ ರಾಜ್ಯದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹ ಧನವನ್ನು ಸೇರಿಸಿ ಮಾಸಿಕ ಕನಿಷ್ಠ 10 ಸಾವಿರ ರೂ. ನೀಡುವಂತೆ ಆದೇಶ ಹೊರಡಿಸಬೇಕು. ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ಹೆಚ್ಚಳ ಮಾಡಿದಂತೆ 1000 ರೂ. ಪ್ರೋತ್ಸಾಹ ಧನವನ್ನೂ ಆಶಾ ಕಾರ್ಯಕರ್ತೆಯರಿಗೂ ಹೆಚ್ಚಳ ಮಾಡಬೇಕು. ನಿವೃತ್ತ ಆಶಾಗಳಿಗೆ ಇಡುಗಂಟು ನೀಡಬೇಕು. ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರಿಸಬೇಕು ಎಂದು ಒತ್ತಾಯಿಸಿದರು. ಎಐಯುಟಿಯುಸಿ ಉಪಾಧ್ಯಕ್ಷ ಚಂದ್ರಶೇಖರ್ ಮೇಟಿ, ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ಕವಿತಾ, ಕಾರ್ಯದರ್ಶಿ ಚೆನ್ನಾಜಮ್ಮ, ಭಾಗ್ಯ, ಜಯಲಕ್ಷ್ಮೀ, ಅಶ್ವಿನಿ, ಶಶಿಕಲಾ ಸುದ್ದಿಗೋಷ್ಠಿಯಲ್ಲಿದ್ದರು.