ವಿಜಯವಾಣಿ ಸುದ್ದಿಜಾಲ ಧಾರವಾಡ
ನವಲಗುಂದ ತಾಲೂಕಿನ ಗುಡಿಸಾಗರ ಗ್ರಾಮದ ಕೆಲವರು ಮಂಗಳವಾರ ಸಂಜೆ ವಾಂತಿ- ಭೇದಿಯಿಂದ ಅಸ್ವಸ್ಥರಾಗಿದ್ದರು. ನವಲಗುಂದ ಶಾಸಕ ಎನ್.ಎಚ್. ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ ಹಾಗೂ ಎಸ್.ಪಿ. ಗುಂಜನ್ ಆರ್ಯ ಅವರು ತಾಲೂಕು ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ ಅಸ್ವಸ್ಥರರ ಆರೋಗ್ಯ ವಿಚಾರಿಸಿದರು.
ಈ ವೇಳೆ ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ಗ್ರಾಮಕ್ಕೆ ಸಮಯಕ್ಕೆ ಸರಿಯಾಗಿ ಶುದ್ಧೀಕರಿಸಿದ ನೀರು ಸರಬರಾಜು ಮಾಡಬೇಕು. ಸ್ವಚ್ಛತೆ, ಶುದ್ಧ ನೀರಿನ ಬಗ್ಗೆ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಬೇಕು. ಆಸ್ಪತ್ರೆಗೆ ದಾಖಲಾಗಿರುವವರಿಗೆ ಉತ್ತಮ ಚಿಕಿತ್ಸೆ, ಉಚಿತ ಔಷದಿ ನೀಡಬೇಕೆಂದು ಸೂಚಿಸಿದರು.
ಜಿಲ್ಲಾಽಕಾರಿ ದಿವ್ಯ ಪ್ರಭು ಮಾತನಾಡಿ, 19 ಜನ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರ ಆರೋಗ್ಯ ಸ್ಥಿರವಾಗಿದೆ. ಗ್ರಾಮಸ್ಥರು ಕುಡಿಯುವ ನೀರಿನ ಕೆರೆಯಿಂದ ಈ ಘಟನೆ ಆಗಿದೆ ಎಂದು ದೂರಿದ್ದಾರೆ. ಪರಿಶೀಲಿಸಿ, ವರದಿ ನೀಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇಂಜಿನಿಯರ್‌ಗೆ ನಿರ್ದೇಶನ ನೀಡಲಾಗಿದೆ. ಈಗಾಗಲೇ ಗ್ರಾಮದ ಕೆರೆ, ಮೇಲ್ಮಟ್ಟದ ಜಲಸಂಗ್ರಹಗಾರ ಮತ್ತು ಮನೆಗಳ ನಳದಿಂದ ನೀರು ಸಂಗ್ರಹಿಸಿ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ ಮಾತನಾಡಿ, ಪ್ರತಿದಿನ ಗ್ರಾಮಸ್ಥರು ಕೆರೆಯ ಶುದ್ಧೀಕರಿಸಿದ ನೀರು ಕುಡಿಯುತ್ತಾರೆ. ಗ್ರಾಮದ ಆರ್‌ಒ ಘಟಕಗಳನ್ನು ದುರಸ್ತಿಗೊಳಿಸಿ ಆರಂಭಿಸಲು ಸೂಚಿಸಲಾಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ನವಲಗುಂದ ತಹಸೀಲ್ದಾರ್ ಸುಧೀರ ಸಾಹುಕಾರ, ಜಿಲ್ಲಾ ಆರೋಗ್ಯಾಽಕಾರಿ ಡಾ. ಎಸ್.ಎಂ. ಹೊನಕೇರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಜಗದೀಶ ಪಾಟೀಲ, ಗುಡಿಸಾರ ಗ್ರಾ.ಪಂ. ಅಧ್ಯಕ್ಷೆ ರತ್ನಮ್ಮ ಗುಡಿಸಲಮನಿ, ಪಿಡಿಒ ಎಸ್.ಎಂ. ಹೂಗಾರ, ಇತರರಿದ್ದರು.