ಚಿಕ್ಕಬಳ್ಳಾಪುರ: ಜಿಲ್ಲೆಯ ನ್ಯಾಯಾಲಯಗಳಲ್ಲಿ ಬಾಕಿ ಇರುವ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಡಿ.19ಕ್ಕೆ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಭೈರಪ್ಪ ಶಿವಲಿಂಗ ನಾಯಿಕ ತಿಳಿಸಿದ್ದಾರೆ.
ಕರೊನಾ ಸೋಂಕಿನ ಹಿನ್ನೆಲೆಯಲ್ಲಿ ಹಲವು ಪ್ರಕರಣಗಳು ಬಾಕಿ ಉಳಿದಿವೆ. ಇವುಗಳನ್ನು ನಿಯಮಾನುಸಾರ ತ್ವರಿತವಾಗಿ ಇತ್ಯರ್ಥಪಡಿಸಲು ಆದ್ಯತೆ ನೀಡಲಾಗಿದ್ದು, ಕಕ್ಷಿದಾರರು ಸದ್ವಿನಿಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಸೋಮವಾರ ತಿಳಿಸಿದರು.
ಚೆಕ್ ಅಮಾನ್ಯ, ಆರ್ಥಿಕ ವಸೂಲಾತಿ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ರಾಜಿಯಾಗಬಲ್ಲ ಅಪರಾಧ ಪ್ರಕರಣಗಳು, ಕುಟುಂಬ ನ್ಯಾಯಾಲಯ ಹಾಗೂ ಇತರ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣ, ಭೂಸ್ವಾಧೀನ, ವೇತನ ಮತ್ತು ಭತ್ಯೆ, ಪಿಂಚಣಿ, ಕಂದಾಯ ಸೇರಿ ಅರ್ಹ ಪ್ರಕರಣಗಳು ಇತ್ಯರ್ಥಪಡಿಸಲಾಗುವುದು ಎಂದರು.
ಲೋಕ ಅದಾಲತ್ ಪ್ರಕರಣದ ಸರಳ ಇತ್ಯರ್ಥ, ಕಡಿಮೆ ಖರ್ಚಿಗೆ ಸಹಕಾರಿ. ಇದರಲ್ಲಿ ಯಾವುದೇ ಶುಲ್ಕ ಪಾವತಿಸುವಂತಿಲ್ಲ. ಕಕ್ಷಿದಾರರು ನೇರವಾಗಿ ಭಾಗವಹಿಸಬಹುದು. ಸಂಧಾನಕಾರರು ಸೂಚಿಸುವ ಪರಿಹಾರಕ್ಕೆ ಒಪ್ಪಿದ್ದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್ ದೇವರಾಜು ಮತ್ತಿತರರು ಇದ್ದರು.
ಬಾಕಿ ಪ್ರಕರಣಗಳು: ಜಿಲ್ಲೆಯಲ್ಲಿ 2019ನೇ ಸಾಲಿನ ಡಿಸೆಂಬರ್ ಅಂತ್ಯಕ್ಕೆ ಸಿವಿಲ್ 19,086, ಕ್ರಿಮಿನಲ್ 14,168 ಸೇರಿ 33,254 ಪ್ರಕರಣಗಳು ಮತ್ತು 2020ನೇ ಸಾಲಿನ ನವೆಂಬರ್ ಅಂತ್ಯಕ್ಕೆ ಸಿವಿಲ್-20,987, ಕ್ರಿಮಿನಲ್ 16,484 ಸೇರಿ 37,471 ಪ್ರಕರಣಗಳು ಬಾಕಿ ಇವೆ ಎಂದು ನ್ಯಾಯಾಧೀಶರು ಮಾಹಿತಿ ನೀಡಿದರು.