ಹಾಸನ: ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ವತಿಯಿಂದ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೆ.19ರಂದು ಬೆಂಗಳೂರಿನ ವಿಧಾನಸೌಧ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಫೆಡರೇಷನ್ ಜಿಲ್ಲಾ ಸಂಚಾಲಕ ಎಂ.ಸಿ.ಡೋಂಗ್ರೆ ತಿಳಿಸಿದರು.
ಅಂಗನವಾಡಿ ಉಳಿಸಿ, ಅಂಗನವಾಡಿಗಳನ್ನು ಬಲಪಡಿಸಿ ಎಂದು ಆಗ್ರಹಿಸಿ ಪ್ರಮುಖ ಐದು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ನಾಲ್ಕು ಪ್ರಮುಖ ಸಂಘಟನೆಗಳು ಸೇರಿ ಸಂಯುಕ್ತ ಸಂಘರ್ಷ ಸಮಿತಿ ಎಂಬ ಐಕ್ಯ ವೇದಿಕೆಯಲ್ಲಿ ಸರ್ಕಾರದ ಗಮನ ಸೆಳೆಯಲು ಬೆಂಗಳೂರಿನ ಫ್ರೀಡಂ ಪಾರ್ಕ್‌ನಿಂದ ಹೋರಾಟ ನಡೆಯಲಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಅಪೆಕ್ಸ್ ಕೋರ್ಟ್ ತೀರ್ಪು ನೀಡಿದ್ದರೂ ರಾಜ್ಯ ಸರ್ಕಾರ ಗ್ರಾಚ್ಯುಟಿ ಸೌಲಭ್ಯ ನೀಡಲು ಮೀನಾಮೇಷ ಎಣಿಸುತ್ತಿದ್ದು, ಅದನ್ನು ಕೂಡಲೇ ಅನುಷ್ಠಾನಗೊಳಿಸಬೇಕು. ಹಾಗೆಯೇ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ., ಸಹಾಯಕರಿಗೆ 10 ಸಾವಿರ ರೂ.ಗೆ ಹೆಚ್ಚಿಸಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಗಳಾಗಿವೆ. ಈ ಭರವಸೆಗಳನ್ನು ಈಡೇರಿಸುವುದಾಗಿ ಕಳೆದ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ಭರವಸೆ ನೀಡಿತ್ತು. ಅವರು ನುಡಿದಂತೆ ನಡೆದುಕೊಳ್ಳಲಿ ಎಂದು ಆಗ್ರಹಿಸಿದರು.
ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸಬೇಕು. ಇದಕ್ಕೆ ರಾಜ್ಯ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಇದಕ್ಕಾಗಿ ಕೂಡಲೇ ತಜ್ಞರ ಸಮಿತಿ ರಚಿಸಬೇಕು. ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಕ್ತ ತರಬೇತಿ ಕೊಡಿಸಬೇಕು. ಎಲ್ಲಕ್ಕಿಂತ ಮುಖ್ಯವಾಗಿ ಅಂಗನವಾಡಿ ಕೇಂದ್ರಗಳಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಆಗುತ್ತಿದ್ದು, ಇದರಲ್ಲಿ ಗುತ್ತಿಗೆದಾರರು ಹಾಗೂ ಕೆಲ ಅಧಿಕಾರಿಗಳು ಶಾಮೀಲಾಗಿದ್ದಾರೆ. ಈ ವ್ಯವಸ್ಥೆ ಬದಲಿಸಿ ಹಿಂದೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿದ್ದ ಸಮಿತಿ ಪದ್ಧತಿಯನ್ನೇ ಮುಂದುವರಿಸಬೇಕು. ಜತೆಗೆ ನೇಮಕಾತಿಯ ವಯೋಮಿತಿ ಸಡಿಲಿಸಿ ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 40 ವರ್ಷ ಹಾಗೂ ಸಾಮಾನ್ಯ ವರ್ಗದವರಿಗೆ 38 ವರ್ಷ ಮಾಡಬೇಕು ಎಂದು ಒತ್ತಾಯಿಸುವುದು ಪ್ರತಿಭಟನೆಯ ಉದ್ದೇಶ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಫೆಡರೇಷನ್ ಜಿಲ್ಲಾಧ್ಯಕ್ಷೆ ಜಯಲಕ್ಷ್ಮೀ, ಕಾರ್ಯಾಧ್ಯಕ್ಷರಾದ ಕಾಮ್ರೆಡ್ ಕೆ. ನೇತ್ರಾವತಿ ಇದ್ದರು.