ನರಗುಂದ: ಸವದತ್ತಿ ಪಟ್ಟಣಕ್ಕೆ ನಿರಂತರ ನೀರು ಪೂರೈಕೆ ಯೋಜನೆಯಡಿ ನವಿಲುತೀರ್ಥ ಜಲಾಶಯದಲ್ಲಿ ಜಾಕ್‌ವೆಲ್ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಹೀಗಾಗಿ, ಕಳೆದ ಎರಡ್ಮೂರು ದಿನಗಳಿಂದ ಕೆಂಪು ಮಣ್ಣು ಮಿಶ್ರಿತ ನೀರು ಪೂರೈಕೆಯಾಗುತ್ತಿದೆ. ಇದರಿಂದಾಗಿ ಜು. 13ರಿಂದ ಎರಡು ದಿನ ಪಟ್ಟಣಕ್ಕೆ ಕುಡಿಯುವ ನೀರಿನ ಪೂರೈಕೆ ಸ್ಥಗಿತಗೊಳಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಅಮಿತ್ ತಾರದಾಳೆ ತಿಳಿಸಿದರು.
ಪಟ್ಟಣಕ್ಕೆ ಕಲುಷಿತ ನೀರು ಪೂರೈಕೆ ಕುರಿತು ವಿಜಯವಾಣಿಯಲ್ಲಿ ಜು. 13ರಂದು ವಿಸ್ತೃತ ವರದಿ ಪ್ರಕಟಿಸಲಾಗಿತ್ತು. ವರದಿಯಿಂದ ಎಚ್ಚೆತ್ತ ಜಿಲ್ಲಾ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ ಅವರ ಮೌಖಿಕ ಸೂಚನೆ ಮೇರೆಗೆ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಎರಡು ದಿನ ನೀರು ಪೂರೈಕೆ ಸ್ಥಗಿತಗೊಳಿಸುವ ನಿರ್ಧಾರವನ್ನು ಪುರಸಭೆಯ ಅಧಿಕಾರಿಗಳು ಕೈಗೊಂಡಿದ್ದಾರೆ.
ನವಿಲುತೀರ್ಥ ಜಲಾಶಯದಲ್ಲಿ ನೂರಾರು ಟಿಪ್ಪರ್‌ಗಳಿಂದ ಮಣ್ಣು ಸುರಿಯುತ್ತಿದ್ದು, ನೀರು ಕೆಂಪು ಬಣ್ಣಕ್ಕೆ ತಿರುಗಿದೆ. ಹೆಚ್ಚುವರಿ ಪೌಡರ್ ಬಳಸಿ ನೀರು ಶುದ್ಧೀಕರಣಗೊಳಿಸಲು ಯತ್ನಿಸಿದರೂ ಪ್ರಯೋಜನವಾಗುತ್ತಿಲ್ಲ. ಜಲಾಶಯದಲ್ಲಿ ಮಣ್ಣು ಹಾಕುವ ಕಾಮಗಾರಿ ಎರಡು ದಿನದಲ್ಲಿ ಪೂರ್ಣಗೊಳ್ಳಲಿದೆ. ಹೀಗಾಗಿ, ಪಟ್ಟಣಕ್ಕೆ ಜು. 13ರಿಂದ ಜು.15ರ ಮಧ್ಯಾಹ್ನವರೆಗೆ ನೀರು ಪೂರೈಕೆ ಸ್ಥಗಿತಗೊಳಿಸಲಾಗುತ್ತಿದ್ದು, ಸಾರ್ವಜನಿಕರು ಸಹಕರಿಸುವಂತೆ ಪುರಸಭೆ ಮುಖ್ಯಾಧಿಕಾರಿ ಮನವಿ ಮಾಡಿದ್ದಾರೆ.