ಜಿಲ್ಲೆ

2 ದಿನ ಎಐಯುಟಿಯುಸಿ ರಾಜ್ಯ ಸಮ್ಮೇಳನ

ಚಾಮರಾಜನಗರ: ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ವತಿಯಿಂದ ಮೈಸೂರಿನಲ್ಲಿ ಅ.26, 27 ರಂದು 4ನೇ ರಾಜ್ಯ ಮಟ್ಟದ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಸಂಘಟನೆಯ ರಾಜ್ಯ ಸಮಿತಿ ಸದಸ್ಯ ಚಂದ್ರಶೇಖರ್ ಮೇಟಿ ತಿಳಿಸಿದರು.

ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಿಂದ ಟೌನ್‌ಹಾಲ್‌ವರೆಗೂ ಅ.26 ರಂದು ಬೃಹತ್ ಮೆರವಣಿಗೆಯನ್ನು ನಡೆಸಲಾಗುತ್ತದೆ. ಬಳಿಕ ನಡೆಯುವ ವೇದಿಕೆ ಕಾರ್ಯಕ್ರಮವನ್ನು ಸಮಿತಿಯ ರಾಷ್ಟ್ರಾಧ್ಯಕ್ಷ ಕೆ.ರಾಧಾಕೃಷ್ಣ ಉದ್ಘಾಟಿಸಲಿದ್ದಾರೆ. ಪ್ರಧಾನ ಕಾರ್ಯದರ್ಶಿ ಶಂಕರ್ ದಾಸ್ ಗುಪ್ತಾ ಮುಖ್ಯ ಭಾಷಣ ಮಾಡಲಿದ್ದಾರೆ. ಕೆ.ಸೋಮಶೇಖರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಸಮ್ಮೇಳನದಲ್ಲಿ ಕಾರ್ಮಿಕ ವಿರೋಧಿ ನಾಲ್ಕು ಲೇಬರ್ ಕೋಡ್‌ಗಳನ್ನು ರದ್ದುಪಡಿಸಿ, ಪ್ರಸಕ್ತ ಕಾಯಿದೆಗಳನ್ನು ಬಲಪಡಿಸಬೇಕು. 35 ಸಾವಿರ ರೂ. ಕನಿಷ್ಠ ವೇತನ ನಿಗದಿ ಮಾಡಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ಇತರೆ ಹಕ್ಕೊತ್ತಾಯಗಳ ಈಡೇರಿಕೆಗೆ ಆಗ್ರಹಿಸಿ ಮನವಿ ಸಲ್ಲಿಸಲಾಗುವುದು. ಸಮ್ಮೇಳನಕ್ಕೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಉಗ್ರನರಸಿಂಹೇಗೌಡ, ರಾಜ್ಯ ಸಮಿತಿ ಸದಸ್ಯೆ ಎಂ.ಉಮಾದೇವಿ, ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಕಾರ್ಮಿಕರ ಸಂಘದ ಅಧ್ಯಕ್ಷ ಶೃಂಗೇಶ್, ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ಕವಿತಾ, ಸಿಮ್ಸ್ ಕಾರ್ಮಿಕರ ಸಂಘದ ಉಪಾಧ್ಯಕ್ಷ ಬೀರೇಗೌಡ ಹಾಜರಿದ್ದರು.