ಮದ್ದೂರು: ತಾಲೂಕಿನ ಕೌಡ್ಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಟ್ಟಹಳ್ಳಿ ಗ್ರಾಮದಲ್ಲಿ ವಾಂತಿ, ಭೇದಿ ಕಾಣಿಸಿಕೊಂಡು ಸುಮಾರು 21 ಜನರು ಅಸ್ವಸ್ಥಗೊಂಡಿದ್ದು, ವಿವಿಧ ಆಸ್ಪತ್ರೆಯಲ್ಲಿ 6 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದಕ್ಕೆ ಕಲುಷಿತ ನೀರು ಪೂರೈಕೆಯೇ ಕಾರಣ ಎನ್ನುವ ಶಂಕೆ ವ್ಯಕ್ತವಾಗಿದೆ.
ಮಂಡ್ಯ ಸರ್ಕಾರಿ ಆಸ್ಪತ್ರೆಯಲ್ಲಿ 2, ಬೆಂಗಳೂರು ವಿಕ್ಟೋರಿಯ ಆಸ್ಪತ್ರೆಯಲ್ಲಿ 2 ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ಕಳೆದ ಮೂರು ದಿನಗಳಿಂದ ಗ್ರಾಮದಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದ್ದು, ಇದರಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಹೃದಯಾಘಾತದಿಂದ ಸಾವು: ಗ್ರಾಮದಲ್ಲಿ ವಾಂತಿ, ಭೇದಿ ಕಾಣಿಸಿಕೊಂಡ ಬೆನ್ನಲ್ಲೇ ದೇಶಿಗೌಡ (70) ಎಂಬುವವರು ಆಸ್ಪತ್ರೆಯಲ್ಲಿ ಮಂಗಳವಾರ ಸಂಜೆ ಮೃತಪಟ್ಟಿದ್ದಾರೆ. ‘ಇವರಿಗೆ ಮೊದಲೇ ಹೃದ್ರೋಗ ಸಮಸ್ಯೆ ಇತ್ತು. ಇವರು ಹೃದಯಾಘಾತದಿಂದ ಮೃತಪಟ್ಟಿದ್ದು, ಇವರ ಸಾವಿಗೂ ವಾಂತಿ, ಭೇದಿ ಪ್ರಕರಣಕ್ಕೂ ಸಂಬಂಧ ಇಲ್ಲ’ ಎಂದು ತಾಲೂಕು ಆರೋಗ್ಯಾಧಿಕಾರಿ ರವೀಂದ್ರ ಬಿ.ಗೌಡ ಸ್ಪಷ್ಪಪಡಿಸಿದ್ದಾರೆ.
ಸಿಬ್ಬಂದಿ ನಿಯೋಜನೆ: ಘಟನೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ವೈದ್ಯಕೀಯ ಸಿಬ್ಬಂದಿಯನ್ನು ಗ್ರಾಮದಲ್ಲಿ ನಿಯೋಜಿಸಿದ್ದು, ಆಂಬುಲೆನ್ಸ್ ಹಾಗೂ ಔಷಧ ವಿತರಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮೋಹನ್ ಬುಧವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನೀರಿನ ಸ್ಯಾಂಪಲನ್ನು ಜಿಲ್ಲಾ ಲ್ಯಾಬ್‌ಗೆ ಕಳುಹಿಸುವಂತೆ ಸ್ಥಳದಲ್ಲಿದ್ದ ತಾಲೂಕು ಆರೋಗ್ಯಾಧಿಕಾರಿ ಡಾ.ರವೀಂದ್ರ ಅವರಿಗೆ ಸೂಚಿಸಿದರು.
ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಆಶಾಲತಾ, ಕೊಪ್ಪ ಆಸ್ಪತ್ರೆಯ ಆಡಳಿತ ಅಧಿಕಾರಿಗಳಾದ ಡಾ.ಸಚ್ಚಿನ್‌ಗೌಡ ಮತ್ತು ಡಾ.ರಂಜಿತಾ ಇದ್ದರು.