ಬೆಳಗಾವಿ: ಅಂತರಾಷ್ಟ್ರೀಯ ಯೋಗ ದಿನಾಚರಣೆ ಜೂ.21ರಂದು ಸುವರ್ಣ ವಿಧಾನ ಸೌಧದ ಆವರಣದಲ್ಲಿ ನಡೆಯಲಿದ್ದು, ಯೋಗ ದಿನಾಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಹಾಗೂ ಶಾಲಾ - ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಎಲ್ಲ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಸಂಘ ಸಂಸ್ಥೆಗಳು, ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಆಸನದ ವ್ಯವಸ್ಥೆ, ಧ್ವನಿವರ್ಧಕ ಸೇರಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಯೋಗ ಕಾರ್ಯಕ್ರಮಕ್ಕೆ ಆಗಮಿಸಲು ಮಕ್ಕಳಿಗೆ ಬಸ್ ವ್ಯವಸ್ಥೆ ಹಾಗೂ ವೈದ್ಯಕೀಯ ಸೌಲಭ್ಯ ಕಲ್ಪಿಸಲಾಗುವುದು. ಕಾರ್ಯಕ್ರಮದ ಬಳಿಕ ಮಕ್ಕಳಿಗೆ ಅಲ್ಪೋಪಹಾರ ವ್ಯವಸ್ಥೆ ಮಾಡಬೇಕು ಎಂದರು.
ಜಾಥಾ ಕಾರ್ಯಕ್ರಮ:
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕುರಿತು ಜೂ.20ರಂದು ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ನಗರದ ಚನ್ನಮ್ಮ ವೃತ್ತ, ಪಾಲಿಟೆಕ್ನಿಕ್ ಕಾಲೇಜು ಮಾರ್ಗವಾಗಿ ಜಿಪಂ ವರೆಗೆ ಜಾಥಾ ನಡೆಯಲಿದೆ. ಜಾಥಾದಲ್ಲಿ ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿ, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸುವರು ಎಂದರು.
ಜಿಲ್ಲಾ ಆಯುಷ್ ಅಧಿಕಾರಿ ಶ್ರೀಕಾಂತ ಸುಣಧೋಳಿ, ಕ್ರೀಡಾ ಇಲಾಖೆಯ ಉಪ ನಿರ್ದೇಶಕ ಜಿನೇಶ್ವರ ಪಡಾನಾಡ, ಪೊಲೀಸ್ ಇಲಾಖೆ ಅಧಿಕಾರಿಗಳು ಸೇರಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಶಾಲಾ-ಕಾಲೇಜು ಮುಖ್ಯಸ್ಥರು ಸಭೆಯಲ್ಲಿ ಇದ್ದರು.