ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಂಡಿದ್ದು ಸಾಮಾನ್ಯ ಯೋಗಾಭ್ಯಾಸದ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.
ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಕಾರ್ಯಕ್ರಮದ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು.
ಸರ್ ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜೂ.21ರಂದು ಬೆಳಗ್ಗೆ 7 ಗಂಟೆಗೆ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಜಿಲ್ಲಾಮಟ್ಟದ ಕಾರ್ಯಕ್ರಮ ಮತ್ತು ಸಾಮೂಹಿಕ ಯೋಗ ಪ್ರದರ್ಶನ ನಡೆಯಲಿದೆ. ಇದರಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಶಾಲಾ ವಿದ್ಯಾರ್ಥಿಗಳು ಮತ್ತು ಯುವ ಜನರು ಭಾಗವಹಿಸಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಉಪಹಾರ, ಕುಡಿಯುವ ನೀರು, ವಾಹನ ನಿಲುಗಡೆ ವ್ಯವಸ್ಥೆ, ವಿದ್ಯುತ್ ಸಂಪರ್ಕ ಸೇರಿ ಇತರ ಮೂಲ ಸೌಕರ್ಯಗಳನ್ನು ಒದಗಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಆರ್.ಐ. ಖಾಸಿಂ, ಜಿಲ್ಲಾ ಆಯುಷ್ ಅಧಿಕಾರಿ ತಬೀಬಾಬಾನು, ಯೋಗ ತರಬೇತುದಾರ ಸಾಫ್ಟ್‌ಟೆಕ್ ಗೋವಿಂದ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಬೈಲಾಂಜನಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಸ್.ಎಸ್. ಮಹೇಶ್ ಕುಮಾರ್ ಮತ್ತಿತರರು ಇದ್ದರು.
ಸರ್ಕಾರಿ ನೌಕರರ ಕ್ರೀಡಾಕೂಟ
ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜೂ.19 ಮತ್ತು ಜೂ.20ರಂದು ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮವನ್ನು ಜೂ.19ರ ಬೆಳಗ್ಗೆ 11ಕ್ಕೆ ಉನ್ನತ ಶಿಕ್ಷಣ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಉದ್ಘಾಟಿಸಲಿದ್ದು, ಶಾಸಕ ಪಿ.ಇ. ಪ್ರದೀಪ್ ಈಶ್ವರ್ ಅಧ್ಯಕ್ಷತೆ ವಹಿಸಲಿದ್ದಾರೆ.