ಜಿಲ್ಲೆ

23ರಂದು ಬಸವೇಶ್ವರರ 892ನೇ ಜಯಂತ್ಯುತ್ಸವ

ಪಾಂಡವಪುರ: ಹನ್ನೆರಡನೇ ಶತಮಾನದಲ್ಲೇ ಸಮಾನತೆ ಸಾರಿದ ಆದರ್ಶ ಪುರುಷ ಬಸವೇಶ್ವರರ 892ನೇ ಜಯಂತ್ಯುತ್ಸವವನ್ನು ಜಾತ್ಯತೀತ, ಪಕ್ಷಾತೀತವಾಗಿ ಮೇ 23ರಂದು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಎಂ.ಶಿವಕುಮಾರ್ ತಿಳಿಸಿದರು.

ಅಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಬನ್ನಾರಮ್ಮ ದೇವಸ್ಥಾನದಿಂದ ಬಸವಣ್ಣನವರ ಪುತ್ಥಳಿಯನ್ನು ಡೊಳ್ಳು ಕುಣಿತ, ವೀರಗಾಸೆ, ಪೂಜಾ ಕುಣಿತ, ವೀರಭದ್ರ ಕುಣಿತ, ಮಂಗಳಕರ ವಾದ್ಯಗಳೊಂದಿಗೆ ಮೆರವಣಿಗೆ ನಡೆಸಿ ಪಟ್ಟಣದ ಟಿಎಪಿಸಿಎಂಎಸ್ ರೈತ ಸಂಭಾಂಗಣದಲ್ಲಿ ಸಮಾವೇಶಗೊಳ್ಳಲಾಗುವುದು. ಕಾರ್ಯಕ್ರಮದ ಸಾನ್ನಿಧ್ಯವನ್ನು ಸುತ್ತೂರು ಮಠದ ಪೀಠಾಧ್ಯಕ್ಷರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ವಹಿಸಲಿದ್ದು, ಚಂದ್ರವನ ಆಶ್ರಮದ ಪೀಠಾಧ್ಯಕ್ಷರಾದ ಶ್ರೀ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ, ರಾಮಯೋಗೀಶ್ವರ ಮಠ ಪೀಠಾಧ್ಯಕ್ಷರಾದ ಶ್ರೀ ಶಿವಬಸವ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ. ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದ ಪೀಠಾಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜು ಸ್ವಾಮೀಜಿ, ಕುಂದೂರು ಮಠದ ಶರತ್‌ಚಂದ್ರ ಸ್ವಾಮೀಜಿ ಸಮ್ಮುಖದಲ್ಲಿ ಕಾರ್ಯಕ್ರಮ ಜರುಗಲಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಜಯಂತ್ಯುತ್ಸವ ಉದ್ಘಾಟಿಸಲಿದ್ದಾರೆ. ಅರಣ್ಯ ಸಚಿವ ಈಶ್ವರ್ ಬಿ.ಖಂಡ್ರೆ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್, ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಇಂದ್ರೇಶ್, ಮುಖಂಡ ಸಚ್ಚಿದಾನಂದ, ಮನ್‌ಮುಲ್ ನಿರ್ದೇಶಕ ಸಿ.ಶಿವಕುಮಾರ್, ಪುರಸಭೆ ಅಧ್ಯಕ್ಷೆ ಜ್ಯೋತಿಲಕ್ಷ್ಮೀ ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಗುರುಸ್ವಾಮಿ, ಪಿ.ಚಲುವರಾಜು ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಎಸ್.ಆನಂದ್, ಉಪಾಧ್ಯಕ್ಷ ಬಿ.ರುದ್ರೇಶ್, ಖಜಾಂಚಿ ಎ.ಎಂ.ಈರಣ್ಣ, ರಾಜ್ಯ ನಿರ್ದೇಶಕ ಕೆ.ಎಸ್.ದರ್ಶನ್, ಬೇಬಿ ಕುಮಾರಸ್ವಾಮಿ ಇತರರು ಇದ್ದರು.