ಬೆಳ್ತಂಗಡಿ: ಸರ್ವಧರ್ಮೀಯರ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್‌ನಲ್ಲಿ ಈ ವರ್ಷದ ಉರುಸ್ ಮಹಾಸಂಭ್ರಮ ಜ.24ರಿಂದ ಆರಂಭಗೊಂಡು ಫೆ.2ರವರೆಗೆ ವಿವಿಧ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಕಾಜೂರು ಮತ್ತು ಕಿಲ್ಲೂರು ಜಂಟಿ ಜಮಾಅತ್‌ಗಳ ಆಶ್ರಯದಲ್ಲಿ ರಚನೆಯಾಗಿರುವ ಉರುಸ್ ಸಮಿತಿಯ ನೇತೃತ್ವದಲ್ಲಿ ಉರುಸ್ ಕಾರ್ಯಕ್ರಮ ನಡೆಯಲಿದೆ ಎಂದು ಉರುಸ್ ಸಮಿತಿ ಅಧ್ಯಕ್ಷ ಕೆ.ಯು.ಇಬ್ರಾಹಿಂ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್.ಆಟಕೋಯ ತಂಙಳ್ ಕುಂಬೋಳ್ ಮತ್ತು ದ.ಕ. ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ, ಇಂಡಿಯನ್ ಗ್ರಾೃಂಡ್ ಮುಫ್ತಿ ಸುಲ್ತಾನುಲ್ ಉಲಮಾ ಉಸ್ತಾದ್ ಮಾರ್ಗದರ್ಶನದಲ್ಲಿ ನಡೆಯುವ ಕಾರ್ಯಕ್ರಮದ ನೇತೃತ್ವವನ್ನು ಸಯ್ಯಿದ್ ಕಾಜೂರು ತಂಙಳ್ ವಹಿಸಲಿದ್ದಾರೆ. 24ರ ಉದ್ಘಾಟನೆಯಂದು ತಾ. ಸುನ್ನೀ ಸಂಯುಕ್ತ ಜಮಾಅತ್ ಕೋಶಾಧಿಕಾರಿ ಸಯ್ಯಿದ್ ಸಾದಾತ್ ತಂಙಳ್ ಮುಖ್ಯ ಪ್ರಭಾಷಣಗೈಯ್ಯಲಿದ್ದಾರೆ. ಸಯ್ಯಿದ್ ಕೂರತ್ ತಂಙಳ್ ಸುಪುತ್ರ ಸಯ್ಯಿದ್ ಮಶ್‌ಹೂದ್ ತಂಙಳ್ ಎಟ್ಟಿಕುಳಂ ಸಹಿತ ವಿವಿಧ ಜಮಾಅತ್ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ. ಕಿಲ್ಲೂರು ಮಸ್ಜಿದ್‌ನಿಂದ ವಿಶೇಷ ಸಂದಲ್ ಮೆರವಣಿಗೆ ಆಗಮಿಸಿ ಸಂಜೆ 7 ಗಂಟೆಗೆ ಉರುಸ್ ಸಮಿತಿ ಅಧ್ಯಕ್ಷ ಕೆ.ಯು.ಇಬ್ರಾಹಿಂ ಧ್ವಜಾರೋಹಣ ನಡೆಸಲಿದ್ದಾರೆ ಎಂದರು.
ಫೆ.2ರಂದು ಬೆಳಗ್ಗೆ ಉರುಸ್ ನಡೆಯಲಿದ್ದು, ಸಯ್ಯಿದ್ ಕುಂಬೋಳ್ ತಂಙಳ್ ಅಧ್ಯಕ್ಷತೆ ವಹಿಸಲಿದ್ದಾರೆ. ಯೆನೆಪೋಯ ವಿ.ವಿ. ಕುಲಪತಿ ಅಬ್ದುಲ್ಲ ಕುಂಞಿ(ವೈಎಂಕೆ) ಭಾಗವಹಿಸಲಿದ್ದಾರೆ. ಸಂಜೆ ಸಮಾರೋಪದಲ್ಲಿ ಸ್ಪೀಕರ್ ಯು.ಟಿ.ಖಾದರ್, ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್, ಸಯ್ಯಿದ್ ಜಿಫ್ರಿ ತಂಙಳ್ ಬೆಳ್ತಂಗಡಿ, ಸಯ್ಯಿದ್ ಮುಖ್ತಾರ್ ತಂಙಳ್ ಕುಂಬೋಳ್, ಶಾಫಿ ಸಅದಿ ಬೆಂಗಳೂರು, ಡಾ.ಅಬ್ದುರಶೀದ್ ಝೈನಿ ಕಾಮಿಲ್ ಸಖಾಫಿ, ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು, ಡಾ. ದೇವರ್ಸೂಲ ಅಬ್ದುಸ್ಸಲಾಂ ಮುಸ್ಲಿಯಾರ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಉರುಸ್ ಸಮಿತಿ ಅಧ್ಯಕ್ಷ ಕೆ.ಯು.ಇಬ್ರಾಹಿಂ ಕಾಜೂರು, ಉಪಾಧ್ಯಕ್ಷ ಅಬ್ದುಲ್ ಅಝೀಝ್ ಝುಹ್ರಿ ಕಿಲ್ಲೂರು, ಪ್ರ.ಕಾರ್ಯದರ್ಶಿ ಜೆ.ಎಚ್.ಅಬೂಬಕ್ಕರ್ ಸಿದ್ದೀಕ್ ಕಾಜೂರು, ಜತೆಕಾರ್ಯದರ್ಶಿ ಶಾಹುಲ್ ಹಮೀದ್ ಕಿಲ್ಲೂರು, ಕೋಶಾಧಿಕಾರಿ ಮುಹಮ್ಮದ್ ಕಮಾಲ್, ದರ್ಗಾ ಸಮಿತಿ ಉಪಾಧ್ಯಕ್ಷ ಬದ್ರುದ್ದೀನ್ ಕಾಜೂರು, ಅಬೂಬಕ್ಕರ್ ಮಲ್ಲಿಗೆಮನೆ, ಕೋಶಾಧಿಕಾರಿ ಕಿಲ್ಲೂರು ಮಸ್ಜಿದ್ ಮೊದಲಾದವರು ಉಪಸ್ಥಿತರಿದ್ದರು.
ಪ್ರಸಿದ್ಧ ವಾಗ್ಮಿಗಳಿಂದ ಧಾರ್ಮಿಕ ಪ್ರವಚನ
ಉರುಸ್ ಪ್ರಯುಕ್ತ 10 ದಿನಗಳಲ್ಲಿ ಪ್ರತಿದಿನ ರಾತ್ರಿ ಕರ್ನಾಟಕ-ಕೇರಳದ ಪ್ರಸಿದ್ಧ ವಾಗ್ಮಿಗಳಿಂದ ಧಾರ್ಮಿಕ ಪ್ರವಚನ ನಡೆಯಲಿದೆ. ಈ ಉಪನ್ಯಾಸ ಮಾಲಿಕೆಯನ್ನು ಸಯ್ಯಿದ್ ಕಾಜೂರು ತಂಙಳ್ ಉದ್ಘಾಟಿಸಲಿದ್ದಾರೆ. ಜ.30ರಂದು ಬೃಹತ್ ದ್ಸಿಕ್ರ್ ಮಜ್ಲಿಸ್‌ಗೆ ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದ್ ನೇತೃತ್ವ ನೀಡಲಿದ್ದಾರೆ. ನೂತನವಾಗಿ ನಿರ್ಮಾಣವಾಗಿರುವ ಮುಸಾಫಿರ್ ಖಾನಾ ಕಟ್ಟಡದ ಉದ್ಘಾಟನೆ ನಡೆಯಲಿದೆ. ವಕ್ಫ್ ಖಾತೆ ಸಚಿವ ಝಮೀರ್ ಅಹ್ಮದ್ ಖಾನ್ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ದ.ಕ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಬೆಸ್ಟ್ ಫೌಂಡೇಷನ್ ಸಂಸ್ಥಾಪಕ ರಕ್ಷಿತ್ ಶಿವರಾಂ, ವಕ್ಫ್ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸಿರ್ ಭಾಗವಹಿಸಲಿದ್ದಾರೆ ಎಂದರು.
ನಿತ್ಯ ಅನ್ನ ಸಂತರ್ಪಣೆ
ಯಾತ್ರಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಪ್ರತಿದಿನ ಮಧ್ಯಾಹ್ನದ ಊಟದ ವ್ಯವಸ್ಥೆ ಇದ್ದು ದರ್ಗಾದ ಧಾರ್ಮಿಕ ಸಂಪ್ರದಾಯದಂತೆ ರವಿವಾರ ಬೆಲ್ಲದ ಗಂಜಿ ವಿತರಣೆ, ಉರುಸ್ ಕೊನೆಯ ದಿನ ಸಾರ್ವಜನಿಕ ಮಹಾ ಅನ್ನದಾನ ನಡೆಯಲಿದೆ ಎಂದರು.