ಹಾಸನ: ನಗರದ 24ನೇ ವಾರ್ಡಿನಲ್ಲಿ ವಿಶ್ವಕರ್ಮ ಸಮಾಜದ ವತಿಯಿಂದ ನಿರ್ಮಿಸಲಾಗಿರುವ ಶ್ರೀ ಕ್ಷೇತ್ರ ಕಾಳಿಕಾಂಬ ಕಮಠೇಶ್ವರ ದೇವಾಲಯದ ನೂತನ ಉದ್ಘಾಟನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮವನ್ನು ಮಾರ್ಚ್ 26 ರಿಂದ ಐದು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ವಿಶ್ವಕರ್ಮ ಸಮಾಜದ ಪ್ರಧಾನ ಕಾರ್ಯದರ್ಶಿ ಕೆ. ರಾಘವೇಂದ್ರ ಕುಮಾರ್ ತಿಳಿಸಿದರು.
ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ಭವ್ಯವಾದ ದೇವಾಲಯವನ್ನು ನಿರ್ಮಿಸಲಾಗಿದೆ. ನೂತನ ದೇವಾಲಯದ ಶಿಲನ್ಯಾಸ ಮತ್ತು ಲೋಕಾರ್ಪಣೆ ಹಾಗೂ ಬ್ರಹ್ಮ ಕುಲಶೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಮ್ಮ ಸಮಾಜದ ಸ್ವಾಮೀಜಿಗಳು, ಮುಖಂಡರು ಹಾಗೂ ರಾಜಕೀಯ ಪಕ್ಷದ ಗಣ್ಯರು ಆಗಮಿಸಲಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು
ಉದ್ಘಾಟನೆ ದಿನ ನಗರದ ರಾಜಬೀದಿಗಳಲ್ಲಿ ಭವ್ಯ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಮಾರ್ಚ್ 31ರಂದು ಭಾನುವಾರ ಹಾಸನಾಂಬ ಕಲಾಕ್ಷೇತ್ರದಲ್ಲಿ ದೇವಿ ಮಹಾತ್ಮೆ ಎಂಬ ಪೌರಾಣಿಕ ನಾಟಕವನ್ನು ಅಭಿನಯಿಸಲಾಗುವುದು. ಈ ಕಾರ್ಯಕ್ರಮಕ್ಕೆ ಅಯೋಧ್ಯೆಯ ರಾಮ ವಿಗ್ರಹ ಕೆತ್ತನೆಯ ಶಿಲ್ಪಿ ಅರುಣ್ ಯೋಗಿರಾಜ್ ಆಗಮಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಕುಲಬಾಂಧವರು ಹಾಗೂ ಸಾರ್ವಜನಿಕರು ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.