ಮೈಸೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆಗೊಂಡು 50 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅ. 27ರಂದು ಸುವರ್ಣ ಮಹೋತ್ಸವ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ತಿಳಿಸಿದರು.
ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿಈ ಕುರಿತು ಪೂರ್ವಭಾವಿ ಸಭೆ ನಡೆಸಿದರು.
ಕಾರ್ಯಕ್ರಮ ಆಯೋಜಿಸಲು ಉತ್ತಮ ಸ್ಥಳ ಗುರುತಿಸಬೇಕು. ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಸ್ಥಳೀಯ ಪರಿಸರವಾದಿಗಳು, ಕೈಗಾರಿಕೋದ್ಯಮಿಗಳು ಭಾಗವಹಿಸಲು ಆಹ್ವಾನ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ಆಚರಿಸುವ ಉದ್ದೇಶದಿಂದ ಸ್ವಾಗತ ಸಮಿತಿ, ವೇದಿಕೆ ಸಮಿತಿ, ಆಹಾರ ಸಮಿತಿ ಸೇರಿದಂತೆ ವಿವಿಧ ಸಮಿತಿ ರಚಿಸಲಾಗುತ್ತದೆ. ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಯಾವುದೇ ಲೋಪವಾಗದಂತೆ ನಿರ್ವಹಿಸಬೇಕು ಎಂದರು.
ಇ-ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ, ಘನ ತ್ಯಾಜ್ಯ, ಜಲ, ವಾಯುಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಮಾಡಲಾಗುವುದು, ಪರಿಸರ ಸಂರಕ್ಷಣೆ ಕುರಿತಾಗಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳು, ವಸತಿ ಶಾಲೆಗಳ ವಿದ್ಯಾರ್ಥಿಗಳು ಭಾಗಿಯಾಗಬೇಕು, ಪರಿಸರ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳು ಹಾಗೂ ಯುವಕರಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ ಕುಮಾರ್, ನಗರ ವಿಭಾಗದ ಪರಿಸರ ಅಧಿಕಾರಿ ವಿ.ಎಸ್. ಕುಮಾರ್, ಗ್ರಾಮೀಣ ವಿಭಾಗದ ಪರಿಸರ ಅಧಿಕಾರಿ ವಿ.ಸುನೀಲ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.