ಬೆಂಗಳೂರು: ದೊಡ್ಡಬಳ್ಳಾಪುರ ತಾಲೂಕಿನ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜ.28 ರಿಂದ 30 ರವರೆಗೆ ನಡೆಯಲಿರುವ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಇಲಾಖಾಧಿಕಾರಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಪರ ಜಿಲ್ಲಾಧಿಕಾರಿ ಜಗದೀಶ್ ಕೆ.ನಾಯಕ್ ಸೂಚನೆ ನೀಡಿದರು.
ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜ್ಯಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದರು. ಭಾರತ ಸೇವಾದಳ ಸಂಸ್ಥೆ ಸಾರ್ವಜನಿಕ ಶಿಕ್ಷಣ ಇಲಾಖೆ ನೆರವಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಲಿರುವ ವಿದ್ಯಾರ್ಥಿಗಳು ಹಾಗೂ ಯುವ ಜನರನ್ನು ದೇಶದ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ನಿಟ್ಟಿನಲ್ಲಿ ಈ ಮೇಳ ಪೂರಕವಾಗಿದೆ ಹಾಗೂ ಪ್ರತಿ ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಎಂದರಿತು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹೇಳಿದರು.
5 ಸಾವಿರ ವಿದ್ಯಾರ್ಥಿಗಳು ಭಾಗಿ: ರಾಜ್ಯದ ಪ್ರತಿ ಜಿಲ್ಲೆಯಿಂದ ವಿವಿಧ ಶಾಲಾ ಹಾಗೂ ಕಾಲೇಜಿನ ಸೇವಾದಳದ 5 ಸಾವಿರ ವಿದ್ಯಾರ್ಥಿಗಳು ಭಾರತ ಸೇವಾದಳದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳದಲ್ಲಿ ಭಾಗವಹಿಸಲಿದ್ದು, ಕಾರ್ಯಕ್ರಮಕ್ಕೆ ಅಗತ್ಯವಿರುವ ಕುಡಿಯುವ ನೀರಿನ ವ್ಯವಸ್ಥೆ, ಆಹಾರ ವ್ಯವಸ್ಥೆ, ತುರ್ತು ಪರಿಸ್ಥಿತಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಪ್ರಥಮ ಚಿಕಿತ್ಸಾ ವ್ಯವಸ್ಥೆ, ಶಿಬಿರ ಸ್ಥಳದಲ್ಲಿಯೇ ತಾತ್ಕಾಲಿಕ ಆಸ್ಪತ್ರೆ ನಿರ್ಮಾಣ, ಆಂಬುಲೆನ್ಸ್ ವ್ಯವಸ್ಥೆ, ಪೊಲೀಸ್ ಇಲಾಖೆಯಿಂದ ಮಕ್ಕಳ ರಕ್ಷಣೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ಸೂಚನೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಕೆ.ಕರಿಯಪ್ಪ, ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ಕಂದಾಯ ಇಲಾಖೆಯ ಶಿರಸ್ತೇದಾರ ಎಂ.ಎಚ್.ವಿಜಯ್ ಕುಮಾರ್, ಭಾರತೀಯ ಸೇವಾ ದಳ ಸಂಸ್ಥೆಯ ಜಿಲ್ಲಾ ಸಂಯೋಜಕ ಶಿವಕುಮಾರ್ ಮತ್ತಿತರರಿದ್ದರು.