ಹಾಸನ: ಹೊಯ್ಸಳ ರಾಜ್ಯ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರಿ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಉತ್ತಮ ಸೇವೆ ಸಲ್ಲಿಸಿದ ನೌಕರರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಸೆ.29ರಂದು ನಗರದ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಬಿ.ಕೆ. ರುದ್ರಪ್ಪ ತಿಳಿಸಿದರು.
ನಮ್ಮ ಸಹಕಾರ ಸಂಘದಲ್ಲಿ 500ಕ್ಕೂ ಹೆಚ್ಚು ಸದಸ್ಯರಿದ್ದಾರೆ. ಅವರಿಗೆ ಉತ್ತಮ ಸೌಲಭ್ಯವನ್ನು ನೀಡುವ ದೃಷ್ಟಿಯಿಂದ ಮತ್ತು ನೌಕರರಿಗೆ ಕಡಿಮೆ ದರದಲ್ಲಿ ನಿವೇಶನ ನೀಡುವ ಕಾರ್ಯವನ್ನು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ 2023-24 ನೇ ಸಾಲಿನ ಸರ್ವ ಸದಸ್ಯರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಹೆಚ್ಚಿನ ಸಂಖ್ಯೆಯಲ್ಲಿ ನೌಕರರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಸಹಕಾರಿ ಸಂಘದ ಉಪನಿರ್ದೇಶಕರಾದ ಕಿರಣ್ ಕುಮಾರ್ ನೆರವೇರಿಸಲಿದ್ದಾರೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ಮುಖ್ಯಸ್ಥರಾದ ಅರುಣ್ ಕುಲಕರ್ಣಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹಾಗೂ ನಮ್ಮ ಸಂಘದ ಗೌರವಾಧ್ಯಕ್ಷ ಈ. ಕೃಷ್ಣೇಗೌಡ ಮತ್ತು ನಮ್ಮ ಸಂಘದ ಪದಾಧಿಕಾರಿಗಳು ಆಗಮಿಸಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷ ಈ. ಕೃಷ್ಣೇಗೌಡ, ಉಪಾಧ್ಯಕ್ಷ ಡಾ. ಬಿ.ಎಂ. ಲಕ್ಷ್ಮೀಕಾಂತ್, ಸಿ.ಎಸ್. ಶಿವಸ್ವಾಮಿ, ಪ್ರದೀಪ್ ಕುಮಾರ್ ಇತರರು ಇದ್ದರು.