ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:
ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳಿಗೆ ಮುಂದಿನ 3 ತಿಂಗಳೊಳಗೆ ಚುನಾವಣೆ ನಡೆಸುವ ಉದ್ದೇಶವನ್ನು ರಾಜ್ಯ ಸರ್ಕಾರ ಹೊಂದಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಹೇಳಿದರು.
ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಮೀಸಲಾತಿಯಲ್ಲಿ ಹಿಂದಿನ ಬಿಜೆಪಿ ಸರ್ಕಾರ ಗೊಂದಲ ಸೃಷ್ಟಿಸಿತ್ತು. ಅದರಿಂದ ಜಿಪಂ ತಾಪಂ ಚುನಾವಣೆ ವಿಳಂಬವಾಗಿದೆ. ನಾವು ಚುನಾವಣೆ ನಡೆಸಲು ಸಿದ್ಧತೆ ನಡೆಸಿದ್ದು, ಪಕ್ಷದ ಕಾರ್ಯಕರ್ತರಿಗೆ ಅಧಿಕಾರ ನೀಡಲು ಉತ್ಸುಕರಾಗಿದ್ದೇವೆ ಎಂದರು.
ಬಿಜೆಪಿ ಅಧಿಕಾರ ಕೇಂದ್ರೀಕರಣದಲ್ಲಿ ವಿಶ್ವಾಸವಿಟ್ಟಿದೆ. ನಾವು ಅಧಿಕಾರ ವಿಕೇಂದ್ರೀಕರಣದಲ್ಲಿ ನಂಬಿಕೆ ಇಟ್ಟಿದ್ದೇವೆ. ಮುಂದಿನ 7-8 ತಿಂಗಳಲ್ಲಿ ಗ್ರಾಮ ಪಂಚಾಯಿತಿಗಳ ಅಧಿಕಾರವಧಿ ಸಹ ಪೂರ್ಣಗೊಳ್ಳಲಿದೆ. ಅದಕ್ಕೂ ತ್ವರಿತವಾಗಿ ಚುನಾವಣೆ ನಡೆಸುತ್ತೇವೆ ಎಂದು ಹೇಳಿದರು.
ಹಾಲಿನ ದರ ಏರಿಕೆಯಿಂದ ರೈತರಿಗೆ ಹೆಚ್ಚಿನ ಹಣ ಕೊಡುತ್ತೇವೆ. ಕೆಎಂಎಫ್ ಹಾಗೂ ರಾಜ್ಯ ಸರ್ಕಾರಕ್ಕೆ ಈ ಹಣ ಹೋಗುವುದಿಲ್ಲ. ರಾಜ್ಯ ಸರ್ಕಾರದ ಮೇಲೆ ಹೊರೆಯಾಗಿದ್ದರಿಂದ ವಿದ್ಯುತ್ ಬೆಲೆ ಏರಿಕೆ ಮಾಡಿದ್ದೇವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಇಳಿಕೆಯಾದರೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡಿ ಜನರ ಮೇಲೆ ಹೊರೆ ಹಾಕಿದ್ದು ಕೇಂದ್ರ ಸರ್ಕಾರ. 11 ವರ್ಷಗಳಲ್ಲಿ ಬಡವರ ಪರವಾದ ಒಂದೇ ಒಂದು ಕೆಲಸ ಮಾಡಿಲ್ಲ ಎಂದು ಆರೋಪಿಸಿದರು.