ಜಿಲ್ಲೆ

3 ಸಾವಿರ ನೌಕರರು ಬೆಂಗಳೂರಿಗೆ

ಬೀದರ್: ಹೊಸ ಪಿಂಚಣಿ ಯೋಜನೆ (ಎನ್‍ಪಿಎಸ್) ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆಯನ್ನೇ  ಮರು ಜಾರಿಗೊಳಿಸಲು ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಡಿ. 19 ರಿಂದ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿಯಲ್ಲಿ ಜಿಲ್ಲೆಯ ಮೂರು ಸಾವಿರ ಸರ್ಕಾರಿ ನೌಕರರು ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್‍ಪಿಎಸ್ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಕಾಶ ಮಹಿಮಾಕರ್ ತಿಳಿಸಿದ್ದಾರೆ.
ಜಿಲ್ಲೆಯ ಎಂಟೂ ತಾಲ್ಲೂಕುಗಳ ನೌಕರರು ರೈಲು, ಬಸ್ ಹಾಗೂ ಖಾಸಗಿ ವಾಹನಗಳಲ್ಲಿ ರಾಜಧಾನಿಗೆ ತೆರಳಿದ್ದಾರೆ ಎಂದು ಹೇಳಿದ್ದಾರೆ.
‘ಮಾಡು ಇಲ್ಲವೇ ಮಡಿ’ ಘೋಷವಾಕ್ಯದಡಿ ನಡೆಯಲಿರುವ ಅನಿರ್ದಿಷ್ಟಾವಧಿ ಧರಣಿಯಲ್ಲಿ ರಾಜ್ಯದ 2.5 ಲಕ್ಷದಿಂದ 3 ಲಕ್ಷ ನೌಕರರು ಭಾಗವಹಿಸಲಿದ್ದಾರೆ. ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆ ಮರು ಜಾರಿಗೊಳಿಸುವವರೆಗೂ ಧರಣಿ ನಡೆಯಲಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯ ಸರ್ಕಾರಿ ನೌಕರರು ಧರಣಿ ಸತ್ಯಾಗ್ರಹದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.