ಜಿಲ್ಲೆ

ವೋಟಿಂಗ್​ ಬದಲು ಮತಗಟ್ಟೆ ಧ್ವಂಸ ಪ್ರಕರಣ; 20 ಮಹಿಳೆಯರು ಸೇರಿದಂತೆ 33 ಮಂದಿ ಅರೆಸ್ಟ್​

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಮಹದೇಶ್ವರ ಬೆಟ್ಟದ ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ಸಂಭವಿಸಿದ್ದ ಘರ್ಷಣೆಗೆ ಸಂಬಂಧಿಸಿದಂತೆ ಪೊಲೀಸರು 33 ಮಂದಿಯನ್ನು ಬಂಧಿಸಿದ್ದಾರೆ.

ಬಂಧಿತರ ಪೈಕಿ 20 ಮಹಿಳೆಯರು 13 ಪುರುಷರಿದ್ದು, ಮಹದೇಶ್ವರ ಬೆಟ್ಟದ ಪೊಲೀಸ್‌ ಠಾಣೆಯಲ್ಲಿ ಪ್ರತ್ಯೇಕವಾಗಿ ಮೂರು ಪ್ರಕರಣಗಳು ದಾಖಲಾಗಿದ್ದವು. ಎರಡು ಪ್ರಕರಣಗಳಲ್ಲಿ ಕ್ರಮವಾಗಿ 41 ಮತ್ತು 33 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೆಂದಾರೆ ಗ್ರಾಮದ ಗಿರಿಜನ ಮುಖಂಡರು ನೀಡಿರುವ ದೂರಿನ ಆಧಾರದ ಮೇರೆಗೆ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ಹಿನ್ನೆಲೆ?

ಹಲವು ವರ್ಷಗಳಿಂದ ತಮ್ಮ ಗ್ರಾಮಕ್ಕೆ ಮೂಲಬೂತ ಸೌಕರ್ಯಗಳನ್ನು ಜನಪ್ರತಿನಿಧಿಗಳು ಒದಗಿಸಿಲ್ಲ ಎಂದು ಆರೋಪಿಸಿ ಇಂಡಿಗನತ್ತ ಗ್ರಾಮಸ್ಥರು ಮತದಾನವನ್ನು ಬಹಿಷ್ಕರಿಸಿದ್ದರು. ವಿಚಾರ ತಿಳಿದು ಸ್ಥಳಕ್ಕೆ ತೆರಳಿದ ತಹಸೀಲ್ದಾರ್, ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳ ತಂಡ ಗ್ರಾಮಸ್ಥರ ಮನವೊಲಿಸಲು ಮುಂದಾಗಿದ್ದು, ಮತದಾನ ಮಾಡುವಂತೆ ಒತ್ತಾಯಿಸಿದ್ದಾರೆ.

ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ತಹಸೀಲ್ದಾರ್, ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿ ಮತಯಂತ್ರವನ್ನು ಧ್ವಂಸ ಮಾಡಿ ಬೆಂಕಿಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಅಧಿಕಾರಿಗಳು ನೀಡಿದ ದೂರನ್ನು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ 33 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಇನ್ನುಳಿದಿರುವವರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.