ಬೆಳಗಾವಿ ಪ್ರವಾಸಿ ಮಂದಿರ ಆವರಣದಲ್ಲಿ ಡಿಸಿಎಂ ಗೋವಿಂದ ಕಾರಜೋಳ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಡಿಸಿ ಎಂ.ಜಿ.ಹಿರೇಮಠ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಚ್.ವಿ.ದರ್ಶನ, ಎಸ್ಪಿ ಲಕ್ಷ್ಮಣ ನಿಂಬರಗಿ ಇದ್ದರು. 
ಜಿಲ್ಲೆ

377 ಹಳ್ಳಿಗಳ ಮೇಲೆ ಹೆಚ್ಚಿನ ನಿಗಾ

ಬೆಳಗಾವಿ: ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರದಂತೆ ಮುಂಜಾಗ್ರತೆ ವಹಿಸಲಾಗಿದೆ. ಒಂದುವೇಳೆ ಮಳೆ ಹೆಚ್ಚಾದರೆ ಕೃಷ್ಣಾ, ಘಟಪ್ರಭಾ, ಮಲಪ್ರಭಾ ನದಿ ಪಾತ್ರದ ಹಳ್ಳಿಗಳ ಮೇಲೆ ಕಟ್ಟೆಚ್ಚರ ವಹಿಸಲು ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಂದಾಯ, ಕೃಷಿ, ತೋಟಗಾರಿಕೆ, ಜಿಪಂ, ಪೊಲೀಸ್ ಸೇರಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನದಿಗಳ ಪ್ರವಾಹ, ಧಾರಾಕಾರ ಮಳೆಯಿಂದ ಜಿಲ್ಲೆಯಲ್ಲಿ ಪ್ರತಿವರ್ಷ ಪ್ರವಾಹಕ್ಕೆ ತುತ್ತಾಗುತ್ತಿರುವ 377ಕ್ಕೂ ಅಧಿಕ ಹಳ್ಳಿಗಳ ಮೇಲೆ ನಿಗಾ ವಹಿಸಲಾಗುತ್ತಿದೆ ಎಂದರು.

ಈಗಾಗಲೇ ಪ್ರವಾಹ ಎದುರಿಸಲು 20 ಬೋಟ್, ತುರ್ತು ಸಲಕರಣೆಗಳನ್ನು ವ್ಯವಸ್ಥೆ ಮಾಡಲಾಗಿದೆ. 65 ತಂಡಗಳನ್ನು ರಚನೆ ಮಾಡಲಾಗಿದೆ. ಮರಾಠಿ ಲಘು ಪದಾತಿದಳದ ಎರಡು ತಂಡಗಳು ಸಜ್ಜುಗೊಂಡಿವೆ. ಅಲ್ಲದೆ, ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿಯೇ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಕಾಳಜಿ ಕೇಂದ್ರ, 270 ಜಾನುವಾರು ಆರೈಕೆ ಕೇಂದ್ರ ಆರಂಭಿಸಲು ಸೂಚನೆ ನೀಡಲಾಗಿದೆ ಎಂದರು.

7.15 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ: ಮುಂಗಾರು ಹಂಗಾಮಿನ ಪೂರ್ವದಲ್ಲಿ ಜಿಲ್ಲೆಯಲ್ಲಿ ಉತ್ತಮ ಮಳೆ ಆಗುತ್ತಿರುವುದರಿಂದ ರೈತ ಸಮುದಾಯ ಹರ್ಷದಲ್ಲಿದೆ. ಈ ಬಾರಿ 7.15 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹಾಕಿಕೊಳ್ಳಲಾಗಿದೆ. ಅಲ್ಲದೆ ಬಿತ್ತನೆಗೆ 1.87 ಲಕ್ಷ ಕ್ವಿಂಟಾಲ್ ಬೀಜ, 2.56 ಲಕ್ಷ ಮೆ.ಟನ್ ರಸಗೊಬ್ಬರದ ಅವಶ್ಯಕತೆಯಿದೆ. ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆ ಮಾಡಲಾಗುತ್ತಿದೆ. ಜಿಲ್ಲೆಯ 189 ಕೇಂದ್ರಗಳಲ್ಲಿ ಬಿತ್ತನೆ ಬೀಜ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಅಲ್ಲಲ್ಲಿ ಉತ್ತಮ ಮಳೆಯಾಗಿದ್ದರಿಂದ ಬಿತ್ತನೆ ಕಾರ್ಯ ಪ್ರಗತಿ ಹಂತದಲ್ಲಿದೆ. ಅಲ್ಲದೆ, ಕೆಲವೆಡೆ ಭೂಮಿಯಲ್ಲಿ ತೇವಾಂಶ ಇಲ್ಲದಿರುವ ಕಾರಣ ಬಿತ್ತನೆ ಕಾರ್ಯ ಆರಂಭವಾಗಿಲ್ಲ. ಜೂನ್ ಮೊದಲ ವಾರ ಮುಂಗಾರು ಆರಂಭವಾಗಲಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದರು. ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಲ್ಲಾ ಪಂಚಾಯಿತಿ ಸಿಇಒ ಎಚ್.ವಿ.ದರ್ಶನ್, ಎಸ್‌ಪಿ ಲಕ್ಷ್ಮಣ ನಿಂಬರಗಿ, ಎಡಿಸಿ ಅಶೋಕ ದುಡಗುಂಟಿ ಇದ್ದರು.

ಚರಂಡಿ ಸ್ವಚ್ಛತೆಗೆ ಆದ್ಯತೆ ನೀಡಲು ಸೂಚನೆ

ಬೆಳಗಾವಿ ಮಹಾನಗರ ಪಾಲಿಕೆ ಸೇರಿ ಜಿಲ್ಲೆಯ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪ್ರದೇಶಗಳಲ್ಲಿನ ಚರಂಡಿಗಳನ್ನು ಮಳೆಗಾಲ ಆರಂಭವಾಗುವ ಮುನ್ನ ಸ್ವಚ್ಛಗೊಳಿಸಬೇಕು. ಮಳೆಗಾಲ ಸಂದರ್ಭದಲ್ಲಿ ಚರಂಡಿಗಳು ಬ್ಲಾಕ್ ಆಗಿ ಸ್ಥಳೀಯ ನಿವಾಸಿಗಳಿಗೆ ಸಮಸ್ಯೆ ಉಂಟಾದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು. ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಚರಂಡಿ ನಿರ್ಮಿಸಬೇಕು. ಮನೆಗಳಿಗೆ ನೀರು ನುಗ್ಗುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಕಾರಜೋಳ ಸೂಚಿಸಿದರು.