ಜಿಲ್ಲೆ

4.95 ಕೋಟಿ ರೂ. ವೆಚ್ಚದಲ್ಲಿ ಶಿಕ್ಷಣ ಸೌಧ ನಿರ್ಮಾಣ

ಹಾಸನ: ಶಿಕ್ಷಣಕ್ಕೆ ಸಂಬಂಧಿಸಿದ ಎಲ್ಲಾ ಕಚೇರಿಗಳನ್ನು ಒಂದೇ ಸೂರಿನಡಿ ತರಲು 4.95 ಕೋಟಿ ರೂ. ವೆಚ್ಚದಲ್ಲಿ ಶಿಕ್ಷಣ ಸೌಧ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದು ಶಾಸಕ ಪ್ರೀತಂ ಜೆ.ಗೌಡ ತಿಳಿಸಿದರು.


ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಶುಕ್ರವಾರ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಿತಶಾಸ್ತ್ರ ಪ್ರಾಚಾರ್ಯರ ಮತ್ತು ಉಪನ್ಯಾಸಕರ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 2022-23ನೇ ಸಾಲಿನ ಶೈಕ್ಷಣಿಕ ಕಾರ್ಯಾಗಾರ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ಶಿಕ್ಷಣ ಸೌಧ ಕಟ್ಟಡಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯನ್ನು ಸ್ಥಳಾಂತರಿಸಲಾಗುವುದು. ಸುಸಜ್ಜಿತ ಕಟ್ಟಡ ನಿರ್ಮಿಸಿ ಅದರೊಳಗೆ ಶಿಕ್ಷಣ ಇಲಾಖೆ ಸಂಬಂಧಿಸಿದ ಜಿಲ್ಲಾ ಮಟ್ಟದ ಎಲ್ಲಾ ಕಚೇರಿಗಳನ್ನು ಸ್ಥಳಾಂತರಿಸಲಾಗುವುದು ಎಂದು ತಿಳಿಸಿದರು.


ಹೊಸ ವಿಷಯಗಳ ಬಗ್ಗೆ ಅನ್ವೇಷಣೆ ಇಲ್ಲದೆ ಇದ್ದರೆ ವ್ಯಕ್ತಿತ್ವ ವಿಕಾಸನ ಅಸಾಧ್ಯ. ನೂತನ ವಿಚಾರಗಳ ಬಗ್ಗೆ ಅಧ್ಯಯನ ಹಾಗೂ ಅಭ್ಯಾಸ ಮಾಡಿ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು. ಜಗತ್ತಿನ ಬದಲಾವಣೆಗಳಿಗೆ ಅನುಗುಣವಾಗಿ ತಮ್ಮನ್ನು ತಾವು ಒಗ್ಗಿಸಿಕೊಳ್ಳುವ ಅಗತ್ಯ ಇದೆ. ಹೆಚ್ಚಿನ ವಿದ್ಯಾಭ್ಯಾಸ, ನಿರಂತರ ಅಧ್ಯಯನದ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಮುಂದಾಗಬೇಕು ಎಂದರು.


ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಹಾಲಿಂಗಯ್ಯ, ಯೋಗಾನರಸಿಂಹ, ಜಿಲ್ಲಾ ಪ್ರಾಂಶುಪಾಲರ ಸಂಘದ ಗೋಪಾಲ್, ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಸುರೇಶ್, ತಿಪ್ಪೇಸ್ವಾಮಿ, ಕುಮಾರ್, ಮಾಸ್ಟರ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ನಂದಿನಿ, ಸುಜಲ ಕಾಲೇಜಿನ ಲೋಕೇಶ್ ಮತ್ತಿರರು ಉಪಸ್ಥಿತರಿದ್ದರು.