ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮಾತನಾಡಿದರು. ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ನಗರ ಪೊಲೀಸ್ ಆಯುಕ್ತ ಡಾ. ಕೆ.ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಪಂ ಸಿಇಒ ದರ್ಶನ ಎಚ್.ವಿ. ಉಪಸ್ಥಿತರಿದ್ದರು. 
ಜಿಲ್ಲೆ

50 ಕೋಟಿ ರೂ. ಅನುದಾನ ನೀಡಿ

ಬೆಳಗಾವಿ: ಬೆಳಗಾವಿ ಹಾಗೂ ಉತ್ತರ ಕನ್ನಡದಲ್ಲಿ ಮಳೆಯಿಂದ ಹಾನಿಗೊಳಪಟ್ಟ ರಸ್ತೆ, ಕಟ್ಟಡ ದುರಸ್ತಿ ಹಾಗೂ ಸಾರ್ವಜನಿಕರಿಗೆ ಮೂಲಸೌಕರ್ಯ ಕಲ್ಪಿಸಲು ಲೋಕೋಪಯೋಗಿ ಇಲಾಖೆಗೆ ತಕ್ಷಣ 50 ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಕಾರಜೋಳ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದರು.

ಅತಿವೃಷ್ಟಿ ಹಿನ್ನೆಲೆಯಲ್ಲಿ ಪ್ರವಾಹ ಸನ್ನದ್ಧತೆಗಳ ಕುರಿತು ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಶುಕ್ರವಾರ ಹಮ್ಮಿಕೊಂಡಿದ್ದ ಮುಖ್ಯಮಂತ್ರಿ ವಿಡಿಯೋ ಸಂವಾದದಲ್ಲಿ ಬೆಳಗಾವಿಯಿಂದ ಅವರು ಮಾತನಾಡಿ, ಮಳೆಯಿಂದಾಗಿ ಜನರು ಸಮಸ್ಯೆಗೆ ಸಿಲುಕಿಕೊಂಡಿದ್ದಾರೆ. ಸದ್ಯಕ್ಕೆ ಘಟಪ್ರಭಾ ನದಿಗೆ 95 ಸಾವಿರ ಕ್ಯೂಸೆಕ್ ನೀರು ಹರಿದುಬರುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಪರಿಸ್ಥಿತಿ ನಿರ್ವಹಣೆಗೆ ಬೆಳಗಾವಿ ಇನ್ನೊಂದು ಎನ್‌ಡಿಆರ್‌ಎಫ್ ತಂಡ ನಿಯೋಜಿಸಬೇಕು ಎಂದು ಕೋರಿದರು.

ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ನಗರ ಪೊಲೀಸ್ ಆಯುಕ್ತ ಡಾ. ಕೆ.ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಪಂ ಸಿಇಒ ದರ್ಶನ ಎಚ್.ವಿ., ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಪಾಲಿಕೆ ಆಯುಕ್ತ ಜಗದೀಶ ಎಚ್. ಮತ್ತಿತರರು ಇದ್ದರು.

ವಾಡಿಕೆಗಿಂತ ಹೆಚ್ಚು ಅಬ್ಬರಿಸಿದ ವರುಣ: ಬೆಳಗಾವಿ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 6 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ, 66 ಮಿ.ಮೀ. ಮಳೆಯಾ ಗಿರುವುದು ಸಮಸ್ಯೆಗೆ ಕಾರಣವಾಗಿದೆ. ಜಿಲ್ಲಾ ಮುಖ್ಯ ರಸ್ತೆಗಳು ಸೇರಿ 47 ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. 36 ಸೇತುವೆ ಮುಳುಗಡೆಯಾಗಿವೆ. ಭೂಕುಸಿತದಿಂದ ನಿಪ್ಪಾಣಿಯ ಯಮಗರ್ಣಿ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. 51 ಗ್ರಾಮಗಳು ಜಲಾವೃತವಾಗಿವೆ. ಜಿಲ್ಲೆಯ ಐದು ತಾಲೂಕುಗಳ 51 ಗ್ರಾಮಗಳಿಗೆ ನೀರು ನುಗ್ಗಿದೆ. 26 ಕಾಳಜಿ ಕೇಂದ್ರ ಆರಂಭಿಸಿ 2,000 ಜನರಿಗೆ ಆಶ್ರಯ ನೀಡಲಾಗಿದೆ. 224 ಮನೆಗಳು ಭಾಗಶಃ ಹಾಗೂ ಒಂದು ಮನೆ ಸಂಪೂರ್ಣ ಕುಸಿದಿದ್ದು, ಜೀವಹಾನಿಯಾಗಿಲ್ಲ. ಮನೆಹಾನಿಗೆ ಸೂಕ್ತ ಪರಿಹಾರಕ್ಕೆ ಸೂಚನೆ ನೀಡಲಾಗಿದೆ. ಮಳೆ ಕಡಿಮೆಯಾದರೆ ಸದ್ಯಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಮಳೆ ಮುಂದುವರಿದರೆ ಸ್ವಲ್ಪಮಟ್ಟಿಗೆ ತೊಂದರೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಚಿವ ಕಾರಜೋಳ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಇನ್ನೂ ಮೂರು ದಿನ ವರುಣಾಬ್ಬರ

ಆಲಮಟ್ಟಿ ಜಲಾಶಯದಲ್ಲಿ ಸದ್ಯ 1.50 ಲಕ್ಷ ಕ್ಯೂಸೆಕ್ ಒಳಹರಿವು ಇದೆ. ಪ್ರವಾಹ ಪರಿಸ್ಥಿತಿ ನಿಯಂತ್ರಣದಿಂದ ಮುಂಜಾಗ್ರತಾ ಕ್ರಮವಾಗಿ 3 ಲಕ್ಷ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಮಹಾರಾಷ್ಟ್ರದಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗೆ ವಿವರಿಸಿದರು.

ಎಲ್ಲೆಡೆ ವ್ಯಾಪಕ ಮಳೆಯಾಗುತ್ತಿರುವುದರಿಂದ ಯಾವುದೇ ಸಾವು-ನೋವುಗಳಾಗದಂತೆ ಅಧಿಕಾರಿಗಳು 24 ಗಂಟೆಯೂ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ತುರ್ತು ಪರಿಹಾರ ಕಾರ್ಯಕ್ಕೆ ಹಣಕಾಸಿನ ಕೊರತೆಯಿಲ್ಲ. ಎಲ್ಲ ರೀತಿಯ ನೆರವು ಒದಗಿಸಲಾಗುವುದು.| ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ