ಜಿಲ್ಲೆ

7ನೇ ವೇತನ ಆಯೋಗದ ವರದಿ ಯಥಾವತ್​ ಜಾರಿಗೆ ಪ್ರತಿಭಟನೆ

ಜಗನ್ನಾಥ್ ಕಾಳೇನಹಳ್ಳಿ

ತುಮಕೂರು: ಸರ್ಕಾರಿ ನೌಕರರ 7ನೇ ವೇತನ ಆಯೋಗವು ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಶುಕ್ರವಾರ ನೌಕರರು ಪ್ರತಿಭಟಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸಂಘದ ಸರ್ಕಾರಿ ನೌಕರರ ಸಂದ ಜಿಲ್ಲಾ ಟಕದ ನೇತೃತ್ವದಲ್ಲಿ ಪ್ರತಿಭಟಿಸಿದ ನೌಕರರು, ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿ ಯಥಾವತ್​ ಜಾರಿಗೊಳಿಸಬೇಕು, ಎನ್​ಪಿಎಸ್​ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಬೇಕು. ನೌಕರರು ಹಾಗೂ ಕುಟುಂಬದವರಿಗೆ ಆರೋಗ್ಯ ಸಂಜೀವಿನಿ ಯೋಜನೆ ಜಾರಿ ತರುವಂತೆ ಘೋಷಣೆಗಳನ್ನು ಕೂಗಿದರು.

ಎನ್​ಪಿಎಸ್​ ನೌಕರರನ್ನು ಒಪಿಎಸ್​ ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಈಗಾಗಲೇ ಪಂಜಾಬ್​, ರಾಜಸ್ಥಾನ. ಚತ್ತೀಸ್​ಘಡ, ಜಾರ್ಖಂಡ್​, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗೆ ತಂದಿರುವಂತೆ ಹಾಗೂ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಕರ್ನಾಟಕದಲ್ಲೂ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಅನುಮೋದನೆ ನೀಡಿ ಹಿಂದಿನ ಸರ್ಕಾರ ಆಯವ್ಯಯದಲ್ಲಿ ಘೋಷಿಸಿದ್ದು ಶ್ರೀ ಈ ಯೋಜನೆಯನ್ನು ಲೋಕಾರ್ಪಣೆ ಮಾಡುವಂತೆ ಜಿಲ್ಲಾಧ್ಯಕ್ಷ ನರಸಿಂಹರಾಜು ಒತ್ತಾಯಿಸಿದರು.

ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಪೂರ್ಣ ಪ್ರಮಾಣದ ವರದಿ ಸಲ್ಲಿಸಿ ನಾಲ್ಕು ತಿಂಗಳು ಪೂರ್ಣಗೊಂಡರೂ ಮುಖ್ಯಮಂತ್ರಿಗಳು ಸರ್ಕಾರಿ ನೌಕರರ ಸಮ್ಮೇಳನದಲ್ಲಿ ನೀಡಿದ್ದ ಭರವಸೆಯಂತೆ ವೇತನ ಆಯೋಗದ ವರದಿಯನ್ನು ಅನುಷ್ಠಾನಗೊಳಿಸದೆ ಇರುವದರಿಂದ ರಾಜ್ಯ ಸರ್ಕಾರದ ಅಧಿಕಾರಿ, ನೌಕರರು ಸಹಜವಾಗಿಯೇ ವೇತನ ಪರಿಷ್ಕರಣೆ ವಿಳಂಬವಾಗುವುದೆಂಬ ಆತಂಕಕ್ಕೆ ಒಳಗಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಸರ್ಕಾರ ಹಾಗೂ ಸಂಘಟನೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು.

ಈ ವೇಳೆ ಶಾಸಕ ಜಿ.ಬಿ.ಜ್ಯೋತಿಗಣೇಶ್​ ಹಾಗೂ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್​ಗೆ ಸಂಘದ ವತಿಯಿಂದ ಮನವಿ ನೀಡಲಾಯಿತು. ಮನವಿ ಸ್ವೀಕರಿಸಿದ ಶಾಸಕ ಜ್ಯೋತಿಗಣೇಶ್​, ರಾಜ್ಯ ಸರ್ಕಾರಿ ನೌಕರರ ಬೇಡಿಕೆ ನ್ಯಾಯಯುತವಾಗಿದೆ, ಸರ್ಕಾರ ಇವರ ಬೇಡಿಕೆಗಳನ್ನು ಈಡೇರಿಸಬೇಕು, ಈ ಬಗ್ಗೆ ತಾವು ಅಧಿವೇಶನದಲ್ಲಿ ಧ್ವನಿ ಎತ್ತುವುದಾಗಿ ಭರವಸೆಯಿತ್ತರು.

ಸಂಘದ ಜಿಲ್ಲಾ ಕಾರ್ಯದರ್ಶಿ ಟಿ.ಎನ್​.ಜಗದೀಶ್​, ಖಜಾಂಚಿ ಲಕ್ಷ$್ಮಣ್​ ಹಾಗೂ ಪದಾಧಿಕಾರಿಗಳು, ವಿವಿಧ ಇಲಾಖೆ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.