ಜಿಲ್ಲೆ

ಜವಾಬ್ದಾರಿ ಅರಿತರೆ ಉತ್ತಮ ಸಮಾಜ

Davangere - Desk - Mahesh Babu E

ಹೊಸದುರ್ಗ: ಮಕ್ಕಳ ಬದುಕು ರೂಪಿಸುವ ಮಹತ್ತರ ಜವಾಬ್ದಾರಿ ಹೊತ್ತಿರುವ ಶಿಕ್ಷಕರು ತಮ್ಮ ಹೊಣೆಗಾರಿಕೆ ಅರಿತರೆ ಶೈಕ್ಷಣಿಕ ವ್ಯವಸ್ಥೆಯನ್ನು ಉತ್ತಮಪಡಿಸಬಹುದು ಎಂದು ಶಾಸಕ ಬಿ.ಜಿ.ಗೋವಿಂದಪ್ಪ ತಿಳಿಸಿದರು.

ತಾಲೂಕು ಆಡಳಿತ ಪಟ್ಟಣದ ಸಿದ್ಧರಾಮೇಶ್ವರ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜಯಂತಿ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದರು.

ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಕಲಿತವರು ದೇಶದ ಆಡಳಿತದಲ್ಲಿ, ವೈಜ್ಞಾನಿಕ ಕ್ಷೇತ್ರದಲ್ಲಿ ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಅದರೆ, ಬದಲಾದ ಶಿಕ್ಷಣದ ವ್ಯವಸ್ಥೆಯಲ್ಲಿ ಸರ್ಕಾರಿ ಶಾಲೆಗಳ ಕಡಗಣನೆ ನಡೆಯುತ್ತಿದೆ. ಸರ್ಕಾರಿ ಶಾಲೆಯ ಶಿಕ್ಷಕರು ಉತ್ತಮವಾದ ಶೈಕ್ಷಣಿಕ ಹಿನ್ನೆಲೆಯನ್ನು ಹೊಂದಿದ್ದು, ಹೊಸ ವಿಷಯಗಳ ಕುರಿತು ನಿರಂತರ ಅಧ್ಯಯನ ನಡೆಸುವ ಮೂಲಕ ಸರ್ಕಾರಿ ಶಾಲೆಗಳನ್ನು ಬಲಪಡಿಸಬೇಕು ಎಂದು ಮನವಿ ಮಾಡಿದರು.

ಗುರುಭವನ ನಿರ್ಮಾಣಕ್ಕೆ ನೀಡಿರುವ ಜಾಗದ ಕುರಿತು ಅಪಸ್ವರ ಕೇಳಿಬಂದ ಹಿನ್ನೆಲೆಯಲ್ಲಿ ಕಳೆದ ಕೆಡಿಪಿ ಸಭೆಯಲ್ಲಿ ಈ ಕುರಿತು ಚರ್ಚಿಸಿ ಶಿಕ್ಷಕರ ಸಭೆ ಕರೆದು ಸೂಕ್ತ ತೀರ್ಮಾನ ತೆಗೆದುಕೊಳ್ಳುವಂತೆ ಕ್ಷೇತ್ರ ಶಿಕ್ಷಾಣಾಧಿಕಾರಿಗಳಿಗೆ ಸೂಚಿಸಲಾಗಿದೆ. ಅದೇ ಜಾಗದಲ್ಲಿ ನಿರ್ಮಾಣಕ್ಕೆ ಸೂಚಿಸಿದರೂ ಸರಿ, ಬೇಡ ಎಂದರೆ ಬೇರೆ ಸ್ಥಳವನ್ನು ನೀಡಲಾಗುವುದು. ಬಣಗಳನ್ನು ಕೈಬಿಟ್ಟು ಎಲ್ಲರೂ ಒಟ್ಟಾಗಿ ತೀರ್ಮಾನ ಮಾಡುವಂತೆ ಕಿವಿಮಾತು ಹೇಳಿದರು.

ಅನುದಾನಿತ ಶಾಲೆಗಳಲ್ಲಿ ಸಮಸ್ಯೆಗಳಿವೆ, ಅತಿಥಿ ಶಿಕ್ಷಕರಿಗೆ ಸರಿಯಾಗಿ ವೇತನ ಸಿಗುತ್ತಿಲ್ಲ. ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ತಾಲೂಕಿನ ಶಿಕ್ಷಕರ ಸಮಸ್ಯೆಗಳನ್ನು ಪರಿಹಾರ ಮಾಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ತಾಲೂಕಿನ ಶಿಕ್ಷಕರ ನಿಯೋಗದೊಂದಿಗೆ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಸಮಸ್ಯೆ ನಿವಾರಣೆಗೆ ಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ತಹಸೀಲ್ದಾರ್ ಪಟ್ಟರಾಜ ಗೌಡ, ಬಿಇಒ ಸೈಯದ್ ಮೋಸಿನ್, ಬಿಆರ್‌ಸಿ ಶ್ರೀನಿವಾಸ್, ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಆರ್.ಲಕ್ಷ್ಮಯ್ಯ, ಮಾಜಿ ಅಧ್ಯಕ್ಷ ಎಂ.ಆರ್.ಶಾಂತಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ವೀರಭದ್ರಪ್ಪ, ಮಾಜಿ ಅಧ್ಯಕ್ಷ ಮಂಜುನಾಥ್, ಪ್ರೌಡಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಪ್ರಕಾಶ್, ಶಶಿಧರ ಇತರರಿದ್ದರು.