ಜಿಲ್ಲೆ

ಯುವಕರ ಮೇಲೆ ದೊಡ್ಡ ಹೊಣೆಗಾರಿಕೆ

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:

ಸುಸಂಸ್ಕೃತ, ಸುಭದ್ರ ರಾಷ್ಟ್ರ ಹಾಗೂ ಜಾತ್ಯಾತೀತ ಸಮಾಜ ಕಟ್ಟುವ ಜವಾಬ್ದಾರಿ ಇಂದಿನ ಯುವ ಶಕ್ತಿಯ ಮೇಲಿದ್ದು, ಹಿಂದೆಂದಿಗಿಂತಲೂ ಇಂದು ಯುವ ಶಕ್ತಿ ಮೇಲೆ ದೊಡ್ಡ ಹೊಣೆಗಾರಿಕೆ ಇದೆ ಎಂದು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.

ಕಾರವಾರ ರಸ್ತೆಯಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಯುವ ಕಾಂಗ್ರೆಸ್​ಗೆ 65 ವರ್ಷಗಳ ಇತಿಹಾಸವಿದ್ದು, ಮುಖ್ಯಮಂತ್ರಿ ಸೇರಿ ಅನೇಕ ದೊಡ್ಡ ನಾಯಕರನ್ನು ರೂಪಿಸಿದ್ದು ಯುವ ಕಾಂಗ್ರೆಸ್. 2029ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿಕೂಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ. ರಾಹುಲ್ ಗಾಂಧಿ ಅವರೇ ದೇಶದ ಪ್ರಧಾನ ಮಂತ್ರಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಕ್ಷದ ತತ್ವ ಸಿದ್ದಾಂತ, ರಾಜ್ಯ ಸರ್ಕಾರದ ಅಭಿವೃದ್ಧಿ ಕಾಮಗಾರಿಗಳು ಹಾಗೂ ಐದು ಗ್ಯಾರಂಟಿಗಳ ಬಗ್ಗೆ ಜನರಿಗೆ ತಿಳಿ ಹೇಳುವ ಕೆಲಸ ಆಗಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ಕೊಟ್ಟ ಯಾವುದೇ ಭರವಸೆ ಈಡೇರಿಸಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ತಾಂಡವಾಡುತ್ತಿದೆ. ರಾಜ್ಯದ ಐವರು ಕೇಂದ್ರ ಸಚಿವರಾಗಿದ್ದರೂ ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ವಿಫಲವಾಗಿದ್ದಾರೆ. ಮಹದಾಯಿ ಸೇರಿ ಅನೇಕ ಯೋಜನೆಗಳು ಜಾರಿ ಮಾಡಲು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಇಚ್ಛಾಶಕ್ತಿ ಇಲ್ಲ ಎಂದರು.

ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅನಿಲಕುಮಾರ ಪಾಟೀಲ, ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರ, ಯುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ನಿಗಮ್ ಭಂಡಾರಿ, ಹು- ಧಾ ಮಹಾನಗರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅರ್ಜುನ ಪಾಟೀಲ, ಗದಗ ಜಿಲ್ಲಾ ಅಧ್ಯಕ್ಷ ಕೃಷ್ಣ ಪಾಟೀಲ, ಮಂಜುನಾಥ ಎಚ್.ಎಸ್., ರಾಹುಲ ಜಾರಕಿಹೊಳಿ, ಕೃಷ್ಣಗೌಡ ಪಾಟೀಲ, ಶೀತಲ ಮಠಪತಿ, ಇತರರು ಇದ್ದರು.