ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಮುಂದುವರಿಯಲಿದೆ. ಶುಕ್ರವಾರವೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ.
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ದಾವಣಗೆರೆ, ಗದಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಕೋಲಾರದಲ್ಲಿ ಏ.23ರಂದು ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಬೀಳಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಮುನ್ಸೂಚನೆ ಕೊಟ್ಟಿದೆ. ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಸತತವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಗರಿಷ್ಠ ಕನಿಷ್ಠ ತಾಪಮಾನದಲ್ಲಿ ಏರಿಳಿತವಾಗುವ ಜತೆಗೆ ಬಿಸಿಲಿನ ಧಗೆಯೂ ಹೆಚ್ಚಿದೆ.
ಶುಕ್ರವಾರ ರಾಜ್ಯದ ಇತರೆ ಜಿಲ್ಲೆಗಳಗಿಂತ ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನದಲ್ಲಿ 40.1 ಉಷ್ಣಾಂಶ ಹಾಗೂ ಧಾರವಾಡ ಮತ್ತು ಮಂಡ್ಯದಲ್ಲಿ ಕನಿಷ್ಠ ತಾಪಮಾನದಲ್ಲಿ ತಲಾ 20.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.