ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾಡಳಿತದಿಂದ ಅ. 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ಬಹಾದ್ದೂರ ಶಾಸ್ತ್ರೀಜಿ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ, ಜಿಪಂ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಗಾಂಧಿ ಶಾಂತಿ ಪ್ರತಿಷ್ಠಾನ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಅ. 2ರಂದು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಎಲ್ಲ ಅಧಿಕಾರಿಗಳು ತಮಗೆ ಸೂಚಿಸಿದ ಕಾರ್ಯಗಳನ್ನು ತಪ್ಪದೇ ನಿರ್ವಹಿಸಬೇಕು. ಅಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾಡಳಿತದ ಆವರಣದಲ್ಲಿರುವ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು. 9.30ಕ್ಕೆ ಆಲೂರು ವೆಂಕಟರಾವ್ ಭವನದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಕಾರ್ಯಕ್ರಮ ಉದ್ಘಾಟಿಸುವರು ಎಂದರು.
ಗಾಂಧಿವಾದಿ ಡಾ. ಸಂಜೀವ ಕುಲಕರ್ಣಿ ಅವರು ಗಾಂಧೀಜಿ ವಿಚಾರಧಾರೆ ಕುರಿತು ಉಪನ್ಯಾಸ ನೀಡುವರು. ಬಾಲಬಳಗ ಶಾಲೆ ವಿದ್ಯಾರ್ಥಿಗಳಿ೦ದ ಚರಕ ನೂಲುವ ಪ್ರಾತ್ಯಕ್ಷಿಕೆ ಜರುಗುವುದು. ವಾರ್ತಾ ಇಲಾಖೆ ಆಯೋಜಿಸಿದ್ದ ಬಾಪೂಜಿ ಕುರಿತ ಪ್ರಬಂಧ ಸ್ಪರ್ಧೆ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿಪತ್ರ ವಿತರಿಸಲಾಗುವುದು ಎಂದರು.
ಜಿಲ್ಲಾ ಉಪಕಾರ್ಯದರ್ಶಿ ಬಿ.ಎಸ್.ಮೂಗನೂರಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಸುಳ್ಳೊಳ್ಳಿ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.