ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆ ಬಳಿಕ ಮುಸ್ಲಿಂ ವ್ಯಕ್ತಿ ಹೆಸರಲ್ಲಿ ಸಾಮಾಜಿಕ ಜಾಲತಾಣದ ಮೂಲಕ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರಿಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆ ಗೋಕಾಕ ಶಿಂದಿಕುರಬೆಟ್ನ ಸಿದ್ಧಾರೂಢ ಶ್ರೀಕಾಂತ್ ನೇರಲಿ(31) ಬಂಧಿತ ಆರೋಪಿ. ಸಾಮಾಜಿಕ ಜಾಲತಾಣದಲ್ಲಿ ಫೆ.21ರಂದು ಪ್ರಚೋದನಾಕಾರಿ ಪೋಸ್ಟ್ ಮಾಡಿದ್ದ ಆರೋಪದಲ್ಲಿ ಸಿದ್ಧಾರೂಢನನ್ನು ಬಾಗಲಕೋಟೆ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಫೇಸ್ಬುಕ್ನಲ್ಲಿ ನಕಲಿ ಖಾತೆ ತೆರೆದು ಮುಸ್ತಾಕ ಅಲಿ ಹೆಸರಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದ. ಅದೇ ಪೋಸ್ಟ್ಗೆ ಸಂಬಂಧಿಸಿದಂತೆ ಶಿವಮೊಗ್ಗ ಸೈಬರ್ ಠಾಣೆಯಲ್ಲೂ ಪ್ರಕರಣ ದಾಖಲಾಗಿತ್ತು. ಬಾಗಲಕೋಟೆ ಪೊಲೀಸರು ಮಂಗಳವಾರ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.