ಹುಬ್ಬಳ್ಳಿ : ದೇಶದ ಹೆಮ್ಮೆ, ಪರಂಪರೆಯ ಬಗ್ಗೆ ಯುವಕರಿಗೆ ತಿಳಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದ ವತಿಯಿಂದ ನಗರದಲ್ಲಿ ಮಂಗಳವಾರ ಪಾರಂಪರಿಕ ನಡಿಗೆ ಹಮ್ಮಿಕೊಳ್ಳಲಾಗಿತ್ತು.
78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಇಲ್ಲಿನ ವಿದ್ಯಾನಗರದ ಮಹಿಳಾ ವಿದ್ಯಾಪೀಠದಲ್ಲಿ ಜಿಲ್ಲಾಡಳಿತ, ಹುಬ್ಬಳ್ಳಿ ತಾಲೂಕು ಆಡಳಿತ, ಶಾಲಾ ಶಿಕ್ಷಣ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಪಾರಂಪರಿಕ ನಡಿಗೆಯಲ್ಲಿ ವಿವಿಧ ಶಾಲೆಗಳ ಐದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಪಾರಂಪರಿಕ ನಡಿಗೆಯು ವಿದ್ಯಾನಗರದ ಮಹಿಳಾ ವಿದ್ಯಾಪೀಠದಿಂದ ಆರಂಭಗೊಂಡು, ಕಿತ್ತೂರು ಚನ್ನಮ್ಮ ವೃತ್ತ, ಮಹಾನಗರ ಪಾಲಿಕೆ, ಅಂಬೇಡ್ಕರ್ ವೃತ್ತ, ಕೊಪ್ಪಿಕರ ರಸ್ತೆ, ಬ್ರಾಡ್ವೆ ಮಾರ್ಗದ ಮೂಲಕ ಸಂಚರಿಸಿತು.
ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಬಲಿದಾನವಾದ ಬಾಲಕ ನಾರಾಯಣ ದೋಣಿ ಅವರ ಸ್ಮಾರಕಕ್ಕೆ ಗೌರವ ಸಲ್ಲಿಸಲಾಯಿತು. ಪಾರಂಪರಿಕ ನಡಿಗೆ ಮಾರ್ಗದಲ್ಲಿನ ವಿವಿಧ ಮಹಾತ್ಮರ, ಸ್ವಾತಂತ್ರ್ಯ ಹೋರಾಟಗಾರ ಪ್ರತಿಮೆಗಳಿಗೆ ಗಣ್ಯರು ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ, ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕರು ಹೋರಾಟ ಮಾಡಿದ್ದಾರೆ. ಅವರನ್ನು ಸ್ಮರಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಬೃಹತ್ ಪಾರಂಪರಿಕ ನಡಿಗೆ ಯಶಸ್ವಿಯಾಗಿದೆ. ಆ ಮೂಲಕ ಹೊಸ ಪರಂಪರೆ ಪ್ರಾರಂಭವಾಗಿದೆ. ಪ್ರತಿಯೊಬ್ಬರೂ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳನ್ನು ಸ್ಮರಿಸಿ, ಗೌರವಿಸಬೇಕು ಎಂದು ಹೇಳಿದರು.
1942 ರಲ್ಲಿ ನಡೆದ ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಹುಬ್ಬಳ್ಳಿಯ 13 ವರ್ಷದ ಬಾಲಕ ನಾರಾಯಣ ಡೋಣಿ ಅವರು ಹೋರಾಟದಲ್ಲಿ ಭಾಗಿಯಾಗಿ, ಪ್ರಾಣ ತ್ಯಾಗ ಮಾಡಿದರು. ಅವರು ಸುಭಾಷಚಂದ್ರ ಬೋಸ್ ಅವರ ಪ್ರೇರಣೆಯಿಂದ ಹೋರಾಟದಲ್ಲಿ ಧುಮುಕಿದರು. ನಾರಾಯಣ ಡೋಣಿ ಅವರ ಕುರಿತು ಹೆಚ್ಚು ಪ್ರಚಾರ ಮಾಡಬೇಕಿದೆ. ಅವರ ಜೀವನ, ಹೋರಾಟದ ಕುರಿತು ಲ್ಯಾಮಿಂಗ್ಟನ್ ಶಾಲೆಯಲ್ಲಿ ಗ್ಯಾಲರಿ, ಚಿತ್ರಗಳನ್ನು ಅಳವಡಿಸಬೇಕು ಎಂದರು.
ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ಧಾರವಾಡ ಜಿಲ್ಲೆಯು ಸ್ವಾತಂತ್ರ್ಯ ಹೋರಾಟಕ್ಕೆ ತನ್ನದೇ ಆದ ಕೊಡುಗೆ ನೀಡಿದೆ ಎಂದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಪಂ ಸಿಇಒ ಸ್ವರೂಪ ಟಿ.ಕೆ., ಮಹಾಪೌರ ರಾಮಣ್ಣ ಬಡಿಗೇರ, ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ನಾರಾಯಣ ಡೋಣಿ ಅವರ ಮನೆತನದ ಕಂಡೋಬಾ ಡೋಣಿ
ಅವರಿಗೆ ಗಣ್ಯರು ಮಾಲಾರ್ಪಣೆ ಮಾಡಿ, ಗೌರವಿಸಿದರು.
ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಎಸ್ಪಿ ಡಾ.ಗೋಪಾಲ ಬ್ಯಾಕೋಡ, ಹುಬ್ಬಳ್ಳಿ ಶಹರ ತಹಶೀಲ್ದಾರ ಕೆ.ಆರ್.ಪಾಟೀಲ, ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ ಪ್ರಕಾಶ ನಾಶಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ ಬೊಮ್ಮಕ್ಕನವರ, ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಪ್ಪಗೌಡ್ರ, ಜಾನಪದ ತಜ್ಞ ಡಾ.ರಾಮು ಮೂಲಗಿ ಹಾಗೂ ಇತರರು ಭಾಗವಹಿಸಿದ್ದರು.