ಕಲಬುರಗಿ: ಕಲ್ಯಾಣ ಕರ್ನಾಟಕ ಸ್ವಾತಂತ್ರ ದಿನಾಚರಣೆ ನಗರದಲ್ಲಿ ಶನಿವಾರ ಅದ್ದೂರಿಯಾಗಿ ನಡೆಯಿತು. ಮುಂದಿನ ವರ್ಷ ಕಲ್ಯಾಣ ಕರ್ನಾಟಕ ಉತ್ಸವದ ಅಮೃತೋತ್ಸವ ಹಿನ್ನೆಲೆಯಲ್ಲಿ ವರ್ಷವಿಡೀ ಹಮ್ಮಿಕೊಂಡಿರುವ ಕಾರ್ಯಕ್ರಮಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಶನಿವಾರ ನೂತನ ವಿದ್ಯಾಲಯ ಮೈದಾನದಲ್ಲಿ ಬೆಳಗ್ಗೆ ಚಾಲನೆ ನೀಡಿದರು.
ಕಲಬುರಗಿ ಜಿಲ್ಲಾಡಳಿತ ಹಾಗೂ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನಾಚರಣೆ ಸಮಿತಿ ಕಲಬುರಗಿ ವತಿಯಿಂದ ಪೊಲೀಸ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕದ ಅಮೃತ ಮಹೋತ್ಸವದ ನಿಮಿತ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ, ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಪೊಲೀಸ್ ಆಯುಕ್ತಾಲಯ ಕಟ್ಟಡ ಉದ್ಘಾಟನೆ ಸೇರಿ ಹಲವು ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಿದರು. ನಿಜಾಮ್ಶಾಹಿ ಆಳ್ವಿಕೆಯಿಂದ ಮುಕ್ತಿ ದೊರಕಿಸಿದ ರೂವಾರಿ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಸಿಎಂ ಸೇರಿ ಗಣ್ಯರು ಪುಷ್ಪನಮನ ಸಲ್ಲಿಸಿದರು.