ವಿಜಯಪುರ: ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಸ್ವಾಗತಾರ್ಹ. ಆದರೆ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸುವ ಸರ್ಕಾರದ ನಿರ್ಧಾರವನ್ನು ಖಂಡಿಸುವುದಾಗಿ ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ತಿಳಿಸಿದ್ದಾರೆ.
ಕಳೆದ 15 ವರ್ಷಗಳಿಂದ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯಿಂದ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕೆಂದು ಹೋರಾಟ ನಡೆಸಿದ ಫಲವಾಗಿ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜ್ ಮಂಜೂರಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳಿದ್ದು, ಇದಕ್ಕೆ ಲಕ್ಷಾಂತರ ಶುಲ್ಕ ಕಟ್ಟಲು ಸಾಧ್ಯವಾಗದೇ, ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ತಮ್ಮ ಕನಸನ್ನು ತೊರೆದಿದ್ದಾರೆ. ಶಿಕ್ಷಣ ಎನ್ನುವುದು ಕೆಲವೇ ಜನರ ಸ್ವತ್ತಾಗದೆ, ಎಲ್ಲರ ಸ್ವತ್ತಾಗಬೇಕು. ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣ ಸಿಗಬೇಕಾದರೆ ಸರ್ಕಾರವೇ ಸಂಪೂರ್ಣ ಆರ್ಥಿಕ ಜವಾಬ್ದಾರಿ ತೆಗೆದುಕೊಳ್ಳಬೇಕು. ಆಗ ಮಾತ್ರ ಬಡವರು, ಕಾರ್ಮಿಕರ, ರೈತರ ಮಕ್ಕಳಿಗೆ ಶಿಕ್ಷಣ ಸಿಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.