ಜಿಲ್ಲೆ

ಜೂ.10ರಂದು ಅಭಿನಂದನಾ ಸಮಾರಂಭ: ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ಮಾಹಿತಿ

ಮಂಡ್ಯ: ನೂತನ ಶಾಸಕರಾಗಿ ಆಯ್ಕೆಯಾಗಿರುವ ಜಿಲ್ಲೆಯ ಏಳು ಜನಪ್ರತಿನಿಧಿಗಳಿಗೆ ನಗರದಲ್ಲಿ ಜೂ.10ರಂದು ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ತಿಳಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿರುವ ಸಮಾರಂಭವು ಅಂದು ಸಂಜೆ 4ಕ್ಕೆ ಆರಂಭಗೊಳ್ಳಲಿದೆ. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಕೊಮ್ಮೇರಹಳ್ಳಿ ವಿಶ್ವಮಾನವ ಕ್ಷೇತ್ರದ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ವಿಧಾನ ಪರಿಷತ್ ಮಾಜಿ ಅಧ್ಯಕ್ಷ ಬಿ.ರಾಮಕೃಷ್ಣ ಅಧ್ಯಕ್ಷತೆ ವಹಿಸುವರು. ರಾಜ್ಯಸಭೆ ಸದಸ್ಯ ಜಿ.ಸಿ.ಚಂದ್ರಶೇಖರ್ ನೂತನ ಜನಪ್ರತಿನಿಧಿಗಳನ್ನ ಅಭಿನಂದಿಸುವರು. ವಿಶ್ರಾಂತ ಪ್ರಾಚಾರ್ಯ ಡಾ.ಎಸ್.ಬಿ.ಶಂಕರೇಗೌಡ ಅಭಿನಂದನಾ ಭಾಷಣ ಮಾಡುವರು. ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ, ಮಾಜಿ ಶಾಸಕರಾದ ಎಂ.ಶ್ರೀನಿವಾಸ್, ಕೆ.ಟಿ.ಶ್ರೀಕಂಠೇಗೌಡ, ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾಖಾನ್ ಭಾಗವಹಿಸುವರು ಎಂದರು.

ನೂತನ ಶಾಸಕರನ್ನು ಸಮಾರಂಭದಲ್ಲಿ ಅಭಿನಂದಿಸುವ ಜತೆಗೆ ಜಿಲ್ಲೆಯಲ್ಲಾಗಬೇಕಾದ ಅಭಿವೃದ್ಧಿ ಕೆಲಸಗಳ ಬಗ್ಗೆ ಮನವಿ ಸಲ್ಲಿಸಲಾಗುವುದು. ಮೈಷುಗರ್ ಮತ್ತು ಪಿಎಸ್‌ಎಸ್‌ಕೆ ಪುನಶ್ಚೇತನ, ಮಂಡ್ಯ ವಿಶ್ವವಿದ್ಯಾಲಯ, ಕೇಂದ್ರೀಯ ವಿದ್ಯಾಲಯದ ಸಮಸ್ಯೆಗೆ ಪರಿಹಾರ, ಪಾರ್ಕ್/ರಸ್ತೆಗಳ ಅಭಿವೃದ್ಧಿ, ನಗರಸಭೆಯನ್ನು ಮೇಲ್ದರ್ಜೆಗೇರಿಸುವುದು, ಕುಡಿಯುವ ನೀರಿನ ಸಮಸ್ಯೆ ಮತ್ತಿತರ ವಿಷಯಗಳ ಬಗ್ಗೆ ಮನವಿ ಸಲ್ಲಿಸಿ ಅವುಗಳ ಪರಿಹಾರಕ್ಕೆ ಒತ್ತಡ ಹೇರಲಾಗುವುದು ಎಂದು ಹೇಳಿದರು.

ಕರ್ನಾಟಕ ಸಂಘದ ಪದಾಧಿಕಾರಿಗಳಾದ ಹನಕೆರೆ ನಾಗಪ್ಪ, ಎಚ್.ಡಿ.ಸೋಮಶೇಖರ್, ಜಿ.ಎನ್.ಶಿವರುದ್ರಪ್ಪ, ಮೋಹನ್ ಹಾಜರಿದ್ದರು.