ಜಿಲ್ಲೆ

ಅಪಘಾತ ನಾಲ್ವರ ಸಾವು

ಗಂಗಾಧರ ಬಿ ವಿ

ರಾಮನಗರ: ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ, ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದೆ.

ಬೆಂಗಳೂರು-ಮೈಸೂರು ಹೆದ್ದಾರಿಯ ಜಯಪುರ ಬ್ರಿಡ್ಜ್​ ಬಳಿ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದರೆ, ಮತ್ತೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರೆಲ್ಲರೂ ಮಂಡ್ಯ ಜಿಲ್ಲೆಯ ಕೆ.ಆರ್​.ಪೇಟೆ ಮೂಲದವರಾಗಿದ್ದಾರೆ. ಮೃತರನ್ನು ಮುತ್ತುರಾಜು (55), ತಮ್ಮನಗೌಡ (27), ಸಂಜು (28) ಹಾಗೂ ಕಾರು ಚಾಲಕ‌ ಸಚಿನ್‌ (27) ಎಂದು ಗುರುತಿಸಲಾಗಿದೆ. ಸ್ವಿಫ್ಟ್ ಕಾರು ಮೈಸೂರಿನಿಂದ ಬೆಂಗಳೂರು ಕಡೆ ಹೋಗುತ್ತಿತ್ತು.

ಕಾರು ಗುದ್ದಿದ ರಭಸಕ್ಕೆ ಸಂಪೂರ್ಣ ನಜ್ಜುಗುಜ್ಜಾಗಿದೆ. ನಿದ್ದೆ ಮಂಪರಿನಲ್ಲಿದ್ದ ಚಾಲಕ ನಿಯಂತ್ರಣ ಕಳೆದುಕೊಂಡು ತಡೆಗೋಡೆಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗುತ್ತಿದೆ. ಸ್ಥಳಕ್ಕೆ ರಾಮನಗರ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ಕೈಗೊಂಡಿದ್ದಾರೆ.