ಗುಂಡ್ಲುಪೇಟೆ: ಸರ್ಕಾರದಿಂದ ದೊರಕಬೇಕಾದ ಸವಲತ್ತುಗಳನ್ನು ಪಡೆದುಕೊಳ್ಳಲು ಮಹಾಸಭಾ ವತಿಯಿಂದ ಎಲ್ಲ ರೀತಿಯ ಪ್ರಯತ್ನ ನಡೆಸಲಾಗುವುದು ಎಂದು ವೀರಶೈವ ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ ಮಹದೇವ ಬಿದರಿ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ವೀರಶೈವ ಲಿಂಗಾಯತ ಮಹಾಸಭಾ ಪದಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.
ತಾವು ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ಸಂಘಟನೆ ಮಾಡುವ ಸಲುವಾಗಿ 33 ಜಿಲ್ಲೆಗಳಲ್ಲಿಯೂ ಪ್ರವಾಸ ನಡೆಸಲಾಗುತ್ತಿದೆ. ಪ್ರತಿ ಗ್ರಾಮಗಳಲ್ಲಿಯೂ ಮಹಾಸಭಾಗೆ ಹೆಚ್ಚಿನ ಸದಸ್ಯತ್ವ ಪಡೆದುಕೊಳ್ಳುವಂತೆ ಮಾಡಿ, ಅಲ್ಲಿ ಸಂಗ್ರಹವಾದ ನಿಧಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದಲ್ಲಿಯೇ ವಿದ್ಯಾರ್ಥಿವೇತನಗಳನ್ನು ಕೊಡಲಾಗುವುದು. ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಸಮುದಾಯದ ಅನುಕೂಲಕ್ಕೆ ಸುಸಜ್ಜಿತ ಬಸವ ಭವನ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.
ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅವರು ಜಿಲ್ಲೆಯಲ್ಲಿ ಬಸವ ಭವನ ನಿರ್ಮಾಣಕ್ಕೆ 3 ಕೋಟಿ ರೂ.ನೆರವು ನೀಡುವುದಾಗಿ ಪ್ರಕಟಿಸಿದರು.
ಮಾಜಿ ಶಾಸಕ ಸಿ.ಎಸ್.ನಿರಂಜನಕುಮಾರ್ ಮಾತನಾಡಿ, ನಾನು ಶಾಸಕನಾಗಿದ್ದಾಗ ತಾಲೂಕಿನಲ್ಲಿ ಬಸವ ಭವನ ನಿರ್ಮಾಣಕ್ಕೆ ಅನುದಾನ ತಂದಿದ್ದರೂ ನಿವೇಶನ ದೊರಕದೆ ನನೆಗುದಿಗೆ ಬಿದ್ದಿದ್ದು, ಇದಕ್ಕೆ ಮತ್ತೆ ಚಾಲನೆ ನೀಡಬೇಕು ಎಂದು ಹೇಳಿದರು.
ಮಹಾಸಭಾ ಅಧ್ಯಕ್ಷ ಮೂಡ್ಲುಪುರ ನಂದೀಶ್, ಮಾಜಿ ಜಿಲ್ಲಾಧ್ಯಕ್ಷ ಕೊಡಸೋಗೆ ಶಿವಬಸಪ್ಪ, ತಾಲೂಕು ಅಧ್ಯಕ್ಷ ಕಮರಹಳ್ಳಿ ರವಿ, ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಸವಣ್ಣ, ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್, ಮುಖಂಡರಾದ ಜಿ.ಮಡಿವಾಳಪ್ಪ, ನಾಗೇಂದ್ರ, ಕೆ.ಎಸ್.ಮಹೇಶ್, ಡಿ.ಪಿ.ಜಗದೀಶ್, ಎಸ್.ಎಂ.ಮಲ್ಲಿಕಾರ್ಜುನ, ಆರ್.ಎಸ್.ನಾಗರಾಜು, ಶಿವಮೂರ್ತಿ, ಮಹೇಶ್ ಇದ್ದರು.