ಬೆಳಗಾವಿ: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆ ಅಡಿಯಲ್ಲಿ ಹೆಚ್ಚಿನ ಅನುದಾನವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಅನುದಾನ ಬಳಕೆಯಲ್ಲಿ ನಿರ್ಲಕ್ಷೃ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ವಿಧಾನ ಮಂಡಳ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರ ಸ್ವಾಮಿ ಎಚ್ಚರಿಸಿದರು.
ನಗರದ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಯೋಜನೆಗಳು ಮತ್ತು ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಿಧ ಇಲಾಖೆಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಮೀಸಲಿಡುವ ಅನುದಾನ ಶಿಕ್ಷಣಕ್ಕೆ ಹೆಚ್ಚು ಬಳಕೆ ಆಗಬೇಕು. ಶಿಕ್ಷಣ ಹೆಸರಿನಲ್ಲಿ ಅನುದಾನ ದುರ್ಬಳಕೆ ಮಾಡಿಕೊಳ್ಳುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.
ಉತ್ತಮ ಯೋಜನೆ ನಿರ್ಮಿಸಿ:
ಸಾಮಾಜಿಕ ಅಸಮಾನತೆ ತೊಡೆದು ಹಾಕಲು, ದುರ್ಬಲ ವರ್ಗಕ್ಕೆ ಉತ್ತಮವಾದಂತಹ ಯೋಜನೆ ನಿರ್ಮಿಸುವುದರ ಮೂಲಕ ಪರಿಶಿಷ್ಟರನ್ನು ಸಮಾಜವನ್ನು ಮುನ್ನೆಲೆಗೆ ತರಬಹುದಾಗಿದ್ದು, ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಇಲಾಖೆಗಳಲ್ಲಿ ಮೀಸಲಿಟ್ಟಿರುವ ಅನುದಾನವನ್ನು ಕಾಲಮಿತಿ ಒಳಗಾಗಿ ವೆಚ್ಚ ಮಾಡಬೇಕು. ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಶಾಲೆ ಸೇರಿದಂತೆ ವಿವಿಧ ಸ್ವತ್ತುಗಳ ನಿರ್ಮಾಣಕ್ಕೆ ಒತ್ತು ನೀಡಬೇಕು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕುಟುಂಬಗಳ ಸಂಖ್ಯೆಗೆ ಅನುಗುಣವಾಗಿ ವೈಯಕ್ತಿಕ ಶೌಚಗೃಹಗಳ ನಿರ್ಮಾಣಕ್ಕೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಖುದ್ದಾಗಿ ಭೇಟಿ ನೀಡಿ ವರದಿ ಸಲ್ಲಿಸಿ:
ಎಸ್‌ಸಿ, ಎಸ್‌ಟಿ ಜನರು ವಾಸಿಸುವ ಪ್ರದೇಶಗಳಲ್ಲಿ ಪ್ರತಿಯೊಂದು ಮನೆಗೆ ನಳ ಸಂಪರ್ಕ ಒದಗಿಸಿರುವ ಮತ್ತು ನೀರು ಬರುತ್ತಿರುವ ಕುರಿತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸಬೇಕು. ಕಾಮಗಾರಿಗಳ ಗುಣಮಟ್ಟ, ಕಳಪೆ ವಸ್ತುಗಳ ಅಳವಡಿಸಿರುವ ಕುರಿತು ಪರಿಶೀಲನೆಗಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು. ದೇವದಾಸಿಯರಿಗೆ ಪುನರ್ವಸತಿ ಕಲ್ಪಿಸುವ ಯೋಜನೆಯಡಿ ನಿವೇಶನ ಹಾಗೂ ವಸತಿ ಇಲ್ಲದ ದೇವದಾಸಿಯರನ್ನು ಗುರುತಿಸಿ ಅವರಿಗೆ ಸಮರ್ಪಕವಾಗಿ ಪುನರ್ವಸತಿ ಕಲ್ಪಿಸುವ ಕಾರ್ಯವಾಗಬೇಕು. ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತ ಜಂಟಿಯಾಗಿ ಕೆಲಸ ಮಾಡಬೇಕು ಎದರು.
ಸಮಿತಿ ಸದಸ್ಯರಾದ ಎನ್.ರವಿಕುಮಾರ, ಡಾ.ಡಿ.ತಿಮ್ಮಯ್ಯ, ಕೃಷ್ಣಾ ನಾಯಕ, ಡಿ.ಎಂ.ಐಹೋಳೆ, ಜಿಪಂ ಸಿಇಒ ರಾಹುಲ ಶಿಂಧೆ, ಎಸ್‌ಪಿ ಡಾ.ಭೀಮಾಶಂಕರ ಗುಳೆದ, ಬಸವರಾಜ ಮತ್ತಿಮುಡು, ಶಾಂತಾರಾಮ್ ಸಿದ್ಧಿ ಇತರರಿದ್ದರು.