ಜಿಲ್ಲೆ

ಅಲೆಮಾರಿ ಜನಾಂಗದವರ ಅಭಿವೃದ್ಧಿಗೆ ಕ್ರಮ

ಆದರ್ಶ್. ಎಂ.ಕೆ.

ಮಡಿಕೇರಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರ ಸರ್ವತೋಮುಖ ಅಭಿವೃದ್ಧಿಗೆ ಪರಿಣಾಮಕಾರಿಯಾಗಿ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಪಿ.ಪಿ.ಕವಿತಾ ತಿಳಿಸಿದರು.

ನಗರದ ತಮ್ಮ ಕಚೇರಿಯಲ್ಲಿ ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಹಾಗೂ ಮೀಸಲಾತಿ ಕಲ್ಪಿಸುವ ಸಂಬಂಧ ಗುರುವಾರ ನಡೆದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದರು.

ಕೊಡಗು ಜಿಲ್ಲೆಯಲ್ಲಿ ಅಲೆಮಾರಿ/ ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ಗೊಲ್ಲ, ಜೋಗಿ ಹಾಗೂ ಹಾವಾಡಿಗರ ಜಾತಿಗಳು ಪ್ರಮುಖವಾಗಿದೆ. ಈ ಸಮಾಜಗಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ನೀಡುವುದು. ಕಳೆದ ವರ್ಷ ೩೦ ವಿದ್ಯಾರ್ಥಿಗಳಿಗೆ ೨.೧೩ ಲಕ್ಷ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

ಅರಿವು ಕಾರ್ಯಕ್ರಮದಡಿ ೨೦೨೧-೨೨ನೇ ಸಾಲಿನಲ್ಲಿ ಮಡಿಕೇರಿ ತಾಲೂಕಿನ ಅಯ್ಯಂಗೇರಿ ಗ್ರಾಮದಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಗಿದೆ. ೨೦೨೩-೨೪ನೇ ಸಾಲಿಗೆ ಮನೆ ನಿರ್ಮಾಣಕ್ಕಾಗಿ ೬ ಮನೆಗಳ ಅರ್ಜಿ ಆಯ್ಕೆ ಮಾಡಿ ಅನುಮೋದನೆಗೆ ಕಳುಹಿಸಲಾಗಿದೆ. ಹಾಗೆಯೇ ಮೂಲ ಸೌಲಭ್ಯಕ್ಕೆ ಒತ್ತು ನೀಡುವಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ, ಕುಡಿಯುವ ನೀರು ಟ್ಯಾಂಕ್ ನಿರ್ಮಿಸಲಾಗಿದೆ. ೨೦ ಲಕ್ಷ ರೂ. ಅನುದಾನದಲ್ಲಿ ಸಿಸಿ ರಸ್ತೆ ನಿರ್ಮಿಸಲು ಹಣ ಬಿಡುಗಡೆಯಾಗಿದೆ. ಸಂಪಾಜೆ ಬಳಿಯ ಕಲ್ಲಾಳ ಗ್ರಾಮದಲ್ಲಿ ಹಾಗೂ ಶನಿವಾರಸಂತೆಯ ತ್ಯಾಗರಾಜ ಕಾಲೋನಿಯ ಹಾವಾಡಿಗರ ಕಾಲೋನಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಕವಿತಾ ವಿವರಿಸಿದರು.

ಡಿ.ದೇವರಾಜ ಅರಸು ನಿಗಮದ ವ್ಯವಸ್ಥಾಪಕಿ ಮಹಾದೇವಿ ಮಾತನಾಡಿ, ಸ್ವಯಂ ಉದ್ಯೋಗ ಸಾಲಯೋಜನೆ, ಬ್ಯಾಂಕ್ ಸಹಯೋಗದೊಂದಿಗೆ ಸಾಲ ಯೋಜನೆ, ಗಂಗಾ ಕಲ್ಯಾಣ ಹಾಗೂ ಸ್ವಾವಲಂಬಿ ಸಾರಥಿ ಯೋಜನೆ ಇವುಗಳನ್ನು ಬಳಸಿಕೊಳ್ಳುವಂತಾಗಬೇಕು. ಅಲೆಮಾರಿ/ ಅರೆ ಅಲೆಮಾರಿ ಸಮುದಾಯದ ಜನರು ವಿವಿಧ ಸೌಲಭ್ಯಗಳನ್ನು ಪಡೆದುಕೊಳ್ಳಲು ಮುಂದೆ ಬರಬೇಕು. ಯಾವುದೇ ಕಾರಣಕ್ಕೂ ಹಿಂಜರಿಕೆ ಪಡಬಾರದು ಎಂದರು.

ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ವಯೋಮಿತಿ ೧೮ ವರ್ಷಗಳಿಂದ ೫೫ ವರ್ಷಗಳ ಮಿತಿಯಲ್ಲಿರಬೇಕು. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು ೨೧ ವರ್ಷ ಮೇಲ್ಪಟ್ಟು ೪೫ ವರ್ಷದ ಮಿತಿಯಲ್ಲಿರಬೇಕು. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು ಎಂದು ಮಹದೇವಿ ಹೇಳಿದರು.

ಸಭೆಯಲ್ಲಿ ಸಮಿತಿ ಸದಸ್ಯರಾದ ಭೀಮಯ್ಯ, ಯಮುನಾ ಗಿರೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ಶಿವಶಂಕರ ಇತರರು ಇದ್ದರು.