ಮುಂಡರಗಿ: ಪಟ್ಟಣದ ತಾಪಂ ಸಾಮರ್ಥ್ಯಸೌಧದಲ್ಲಿ ಇಒ ವಿಶ್ವನಾಥ ಹೊಸಮನಿ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಎಸ್ಸಿ ಎಸ್ಪಿ ಮತ್ತು ಟಿಎಸ್ಪಿ ಪ್ರಗತಿ ಪರಿಶೀಲನೆ ಸಭೆ ಬುಧವಾರ ಜರುಗಿತು.
ವಿವಿಧ ಅಧಿಕಾರಿಗಳಿಂದ ಮಾಹಿತಿ ಪಡೆದ ಇಒ ವಿಶ್ವನಾಥ ಅವರು, ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿ ಬಿಡುಗಡೆಯದ ಅನುದಾನವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರಿಗೆ ಮಾತ್ರ ಬಳಕೆ ಮಾಡಬೇಕು. ಒಂದು ವೇಳೆ ಬೇರೆ ಕಡೆ ಬಳಕೆಯಾದ ಬಗ್ಗೆ ದೂರು ಬಂದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಕೃಷಿ ಇಲಾಖೆಯ ಸಹಾಯಕ ನಿರ್ದೆಶಕ ಪ್ರಾಣೇಶ ಅವರು, ಕೃಷಿ ಇಲಾಖೆಯ ಪ್ರಗತಿ ವರದಿ ಹೇಳಿದರು. ಫಲಾನುಭವಿಗಳ ಯಾದಿ ಹಚ್ಚಿ ಪ್ರಗತಿ ವರದಿ ಸಲ್ಲಿಸುವಂತೆ ಇಒ ಅವರು ಪ್ರಾಣೇಶ ಅವರಿಗೆ ತಿಳಿಸಿದರು. ತೋಟಗಾರಿಕೆ ಇಲಾಖೆ ಟಾಪ್ಅಪ್ ಯೋಜನೆ ಅಡಿ ಗ್ರಾಮದವರಿಗೆ ಹನಿ ನೀರಾವರಿಗೆ ಶೇ.35ರಷ್ಟು ಸಹಾಯಧನ ವಿತರಿಸಲಾಗಿದೆ ಎಂದು ತಿಳಿಸಿದರು.
ಲೋಕೋಪಯೋಗಿ ಇಲಾಖೆಯ ಎರಡು ಕಾಮಗಾರಿಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಕಳೆದ ಸಭೆಯಲ್ಲಿ ತಿಳಿಸಲಾಗಿತ್ತು, ಆದರೆ, ಈವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲ ಏಕೆ? ಎಂದು ಇಒ ವಿಚಾರಿಸಿದಾಗ, ಲೋಕೋಪಯೋಗಿ ಇಲಾಖೆಯ ಅಧಿಕಾರಿ ಅವರು, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಕಾಮಗಾರಿ ಪೂರ್ಣಗೊಂಡಿದ್ದು ಹತ್ತು ದಿನಕ್ಕೆ ಇಲಾಖೆಗೆ ಹಸ್ತಾಂತರಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಎ.ಎಂ. ಸೋರಗಾಂವಿ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.