ಜಿಲ್ಲೆ

ಅನುದಾನ ಬಳಸಿಕೊಳ್ಳದಿದ್ದರೆ ಕ್ರಮ

Hassan

ಹಾಸನ: ಎಲ್ಲ ಇಲಾಖೆಗಳು ಅನುಸೂಚಿತ ಜಾತಿ ಪಂಗಡಗಳ ಶ್ರೇಯೋಭಿವೃದ್ಧಿಗೆ ನಿಗದಿಪಡಿಸಿರುವ ಅನುದಾನವನ್ನು ಕಡ್ಡಾಯವಾಗಿ ಸದ್ಬಳಕೆ ಮಾಡಲೇಬೇಕು. ಈ ವಿಚಾರದಲ್ಲಿ ನಿರ್ಲಕ್ಷೃ ತೋರಿದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಜರುಗಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಅನುಸೂಚಿತ ಜಾತಿ ಹಾಗೂ ಪಂಗಡ ಯೋಜನೆಗಳ ಅನುಷ್ಠಾನ ಕುರಿತ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡ ಕಾಯ್ದೆಯ ಬಗ್ಗೆ ಅಧಿಕಾರಿ ಹಾಗೂ ಸಿಬ್ಬಂದಿ ಅರಿವು ಹೊಂದಬೇಕು. ಮಾರ್ಚ್ ಅಂತ್ಯದೊಳಗೆ ಎಲ್ಲ ಇಲಾಖೆಗಳು ಆರ್ಥಿಕ ಹಾಗೂ ಭೌತಿಕ ಗುರಿ ಸಾಧನೆ ಮಾಡಲೇಬೇಕು. ಆ ಮೂಲಕ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಜನ ಸಮುದಾಯವನ್ನು ಮುಖ್ಯವಾಹಿನಿಗೆ ಕರೆತಂದು ದೇಶದ ಅಭಿವೃದ್ಧಿಯಲ್ಲಿ ಪಾಲುದಾರನನ್ನಾಗಿ ಮಾಡಬೇಕು ಎಂದು ಹೇಳಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಿರಿಸುವ ಅನುದಾನ ವ್ಯರ್ಥವಾದರೆ ಸಂಬಂಧಪಟ್ಟ ಕಚೇರಿ ಮುಖ್ಯಸ್ಥರೇ ಹೊಣೆಗಾರರಾಗುತ್ತಾರೆ. ಈಗಾಗಲೇ ಮುಗಿದಿರುವ ಕಾಮಗಾರಿಗಳಿಗೆ ಬಿಲ್ ಪಾವತಿ ಮಾಡಿ ಹಣ ವೆಚ್ಚ ಮಾಡಿ ಗುಣಮಟ್ಟದ ನಿರ್ವಹಣೆಯಲ್ಲಿ ಯಾವುದೇ ಲೋಪಗಳಾಗದಂತೆ ನಿಗಾ ವಹಿಸಬೇಕು ಎಂದರು.

ನೋಟಿಸ್ ಜಾರಿಗೆ ಸೂಚನೆ: ವಾರ್ಷಿಕ ಗುರಿ ಸಾಧನೆಯಲ್ಲಿ ಕಡಿಮೆ ಸಾಧನೆ ಮಾಡಿರುವ ಇಲಾಖಾ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡುವಂತೆ ಜಿಲ್ಲಾಧಿಕಾರಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಇಲಾಖಾ ಅಧಿಕಾರಿಗಳು ಹಣ ವೆಚ್ಚ ಮಾಡದೆ ಕಾರಣಗಳನ್ನು ನೀಡಬಾರದು. ಸಾಮಾಜಿಕ ಹೊಣೆಗಾರಿಕೆ ಅರಿತು ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಕೃಷಿ, ತೋಟಗಾರಿಕೆ ಇಲಾಖೆಗಳು ಸಕಾಲದಲ್ಲಿ ನೀರಾವರಿ ಸೌಲಭ್ಯಗಳನ್ನು ರೈತರಿಗೆ ತಲುಪಿಸಬೇಕು. ಕೈಗಾರಿಕಾ ಇಲಾಖೆ ಅನುಸೂಚಿತ ಜಾತಿ ಮತ್ತು ಪಂಗಡಗಳ ಯುವಕರು ಕೈಗಾರಿಕೆ ಸ್ಥಾಪಿಸಲು ಪ್ರೋತ್ಸಾಹ ಹಾಗೂ ಆರ್ಥಿಕ ನೆರವು ಒದಗಿಸಬೇಕು ಎಂದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ.ಪರಮೇಶ್, ಜಿಲ್ಲಾ ಪಂಚಾಯಿತಿ ಅಧೀನದ ಎಲ್ಲ ಇಲಾಖೆ ಅಧಿಕಾರಿಗಳಿಗೂ ಈಗಾಗಲೇ ಅನುದಾನ ಸದ್ಬಳಕೆ ಕುರಿತು ಸ್ಪಷ್ಟನೆ ನೀಡಲಾಗಿದೆ. ಮಾರ್ಚ್ ಅಂತ್ಯದೊಳಗೆ ಯೋಜನೆಗಳ ಅನುಷ್ಠಾನದಲ್ಲಿ ಶೇ. 100ರಷ್ಟು ಗುರಿ ಸಾಧನೆಗೆ ಸೂಚಿಸಲಾಗಿದೆ ಎಂದು ಹೇಳಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಶಿವರಾಮ್‌ಬಾಬು, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಎ. ಜಗದೀಶ್, ಕೆ. ಮಧುಸೂದನ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀಧರ್ ಇತರರಿದ್ದರು.