ಮೈಸೂರು: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಎಚ್ಚರಿಸಿದರು.
ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಸ್ ಶೆಲ್ಟರ್‌ಗಳ ನಿರ್ಮಾಣ ಕಾಮಗಾರಿ ಮಾಡಲು ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಕ್ರಿಯಾ ಯೋಜನೆ ರೂಪಿಸಿಕೊಳ್ಳಿ. ಸಾಮಾಜಿಕ ಅರಣ್ಯ ಇಲಾಖೆಯಿಂದ ನರೇಗಾ ಯೋಜನೆಯಡಿ ರಸ್ತೆ ಬದಿ ಸಸಿಗಳನ್ನು ನೆಟ್ಟು ಪೋಷಣೆ ಮಾಡಿ. ಶಾಲಾ ಕಾಂಪೌಂಡ್ ಹಾಗೂ ಶಾಲಾ ಮೈದಾನಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಿ ಎಂದು ನಿರ್ದೇಶನ ನೀಡಿದರು.
2021- 22ನೇ ಸಾಲಿನಲ್ಲಿ ಶೇ. 85 ರಷ್ಟು ಕಾಮಗಾರಿಗಳು ಪೂರ್ಣಗೊಂಡಿವೆ. ಉಳಿದ ಶೇ.15 ರಷ್ಟು ಕಾಮಗಾರಿಗಳು ಯಾಕೆ ಪೂರ್ಣಗೊಂಡಿಲ್ಲ ಎಂದು ಪ್ರಶ್ನಿಸಿದ ಅವರು, ಕೆಲಸಗಳನ್ನು ನಿಗದಿತ ಅವಧಿಯೊಳಗೆ ಮುಗಿಸಬೇಕು. ಉಳಿದ ಕಾಮಗಾರಿಗಳ ಸ್ಥಿತಿ ಕುರಿತು ವರದಿ ನೀಡುವುದರೊಂದಿಗೆ ಆದಷ್ಟು ಬೇಗ ಪೂರ್ಣಗೊಳಿಸಬೇಕು. ಇಲ್ಲವಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚಿಸಲಾಗುವುದು ಎಂದು ತಾಕೀತು ಮಾಡಿದರು.
ಲಿಂಕ್ ಡಾಕ್ಯುಮೆಂಟ್ ಅಡಿ ವಿವಿಧ ಇಲಾಖೆಗಳು ಕೈಗೊಂಡಿರುವ ಕಾಮಗಾರಿಗಳನ್ನು ಈ ಆರ್ಥಿಕ ವರ್ಷದಲ್ಲಿಯೇ ಮುಗಿಸಬೇಕು. ಕಾಮಗಾರಿಗಳು ಪೂರ್ಣವಾಗದೇ ಹಣ ವಾಪಸ್ ಹೋದರೆ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದರು.
ಬಯೋ ಫೆನ್ಸಿಂಗ್ ಮಾಡಿ :
ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಮಾತನಾಡಿ, ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿಗಳು ಶಾಲಾ ಆವರಣ, ಮೈದಾನದ ಸುತ್ತ ಗಿಡಗಳನ್ನು ನೆಟ್ಟು ಬಯೋ ಫೆನ್ಸಿಂಗ್ ಮಾಡಬೇಕು. ಇದರಿಂದ ನರೇಗಾ ಯೋಜನೆಯಡಿ ಹೆಚ್ಚಿನ ಮಾನವ ದಿನಗಳ ಪ್ರಗತಿ ಆಗುತ್ತದೆ ಎಂದರು. ವಿವಿಧ ಇಲಾಖೆಗಳು ಕಾಮಗಾರಿಗಳನ್ನು ಹಲವು ಏಜೆನ್ಸಿಗಳಿಗೆ ನೀಡಲಾಗಿರುತ್ತದೆ. ಆ ಇಲಾಖೆ ಅಧಿಕಾರಿಗಳು ಕಾಮಗಾರಿ ಗುಣಮಟ್ಟದಿಂದ ಪೂರ್ಣಗೊಂಡಿದೆಯೇ ಎಂಬುದನ್ನು ಪರಿಶೀಲನೆ ಮಾಡಬೇಕು ಎಂದು ಸೂಚನೆ ನೀಡಿದರು.