ಜಿಲ್ಲೆ

ಜಿಲ್ಲೆಯ 26 ಕೇಂದ್ರದಲ್ಲಿ ಸ್ಮರ್ಧಾತ್ಮಕ ಪರೀಕ್ಷೆ: ಎಡಿಸಿ ಡಾ.ಎಚ್.ಎಲ್.ನಾಗರಾಜು ಮಾಹಿತಿ

ಕೆ.ಎನ್.ರಾಘವೇಂದ್ರ

ಮಂಡ್ಯ: ಇದೇ ಮೊದಲ ಬಾರಿಗೆ ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತಿದೆ. ಅದರಂತೆ ಸೆ.29ರಂದು ಜಿಲ್ಲೆಯ 26 ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದ್ದು, ಯಾವುದೇ ತರಹದ ಲೋಪವಾಗದಂತೆ ಎಚ್ಚರಿಕೆ ವಹಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 12,086 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಂಡ್ಯದಲ್ಲಿ 14, ಮದ್ದೂರಿನಲ್ಲಿ 3, ಮಳವಳ್ಳಿ, ನಾಗಮಂಗಲ, ಪಾಂಡವಪುರ, ಕೆ.ಆರ್.ಪೇಟೆಯಲ್ಲಿ ತಲಾ 2 ಹಾಗೂ ಶ್ರೀರಂಗಪಟ್ಟಣದಲ್ಲಿ 1 ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ. ತಡವಾಗಿ ಬಂದ ಅಭ್ಯರ್ಥಿಗಳನ್ನು ಪರೀಕ್ಷೆಗೆ ಕೂರಿಸುವಂತಿಲ್ಲ. ಮಾತ್ರವಲ್ಲದೆ ಪರೀಕ್ಷೆ ನಡೆಯುವಾಗ ಅರ್ಧಕ್ಕೆ ಅಭ್ಯರ್ಥಿಗಳನ್ನು ಕೊಠಡಿಯಿಂದ ಹೊರಗೆ ಕಳುಹಿಸುವಂತಿಲ್ಲ ಎಂದು ತಿಳಿಸಿದರು.

ಪರೀಕ್ಷಾ ಪರಿವೀಕ್ಷಕರು ಎಚ್ಚರಿಕೆಯಿಂದ ಪ್ರಶ್ನೆಪತ್ರಿಕೆಯನ್ನು ನೋಡಿಕೊಳ್ಳಬೇಕು. ಪರೀಕ್ಷೆ ಪ್ರಾರಂಭವಾಗುವುದಕ್ಕೂ ಒಂದು ಗಂಟೆ ಮುಂಚಿತವಾಗಿ ಪ್ರಶ್ನೆಪತ್ರಿಕೆ ಕ್ರಮವಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಸಂಪೂರ್ಣ ಜವಾಬ್ದಾರಿ ಪರಿವೀಕ್ಷಕರ ಮೇಲಿರುತ್ತದೆ. ತ್ರಿಸದಸ್ಯ ಸಮಿತಿಯ ಸದಸ್ಯರು ನಿಗದಿತ ಸಮಯದಲ್ಲಿ ಖಜಾನೆಗೆ ಹಾಜರಾಗಿ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಯ ಗೌಪ್ಯತಾ ಬಂಡಲ್‌ಗಳನ್ನು ನಿಗದಿತ ಸಮಯಕ್ಕೆ ಸರಿಯಾಗಿ ವಿತರಿಸಬೇಕು ಎಂದರು.

ಪರೀಕ್ಷೆಯನ್ನು ಪಾರದರ್ಶಕತೆಯಿಂದ ನಡೆಸುವ ಸಲುವಾಗಿ ಪ್ರತಿ ಕೇಂದ್ರಕ್ಕೆ ಒಬ್ಬರಂತೆ ‘ಎ’ ಗುಂಪಿನ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನಿಯೋಜಿಸಲಾಗಿದೆ. ನೇಮಕಗೊಂಡ ವೀಕ್ಷಕರ ಪಟ್ಟಿಯನ್ನು ಪ್ರಾಧಿಕಾರಕ್ಕೆ ಕಳುಹಿಸಲಾಗುವುದು. ಪರೀಕ್ಷೆ ನಡೆಯುವ ದಿನ ಕೇಂದ್ರದ ಸುತ್ತಲೂ 200 ಮೀ ಸುತ್ತಳತೆಯಲ್ಲಿ ಐಪಿಸಿ ಸೆಕ್ಷನ್ 144ನೇ ಕಲಂ ಜಾರಿಯಲ್ಲಿರಲಿದೆ. ಆ ಸಮಯದಲ್ಲಿ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳಲಾಗಿದೆ. ಇನ್ನು ಅಭ್ಯರ್ಥಿಗಳು ಯಾವುದೇ ಆಧುನಿಕ ಎಲೆಕ್ಟ್ರಾನಿಕ್ ಉಪಕರಣ, ಮೊಬೈಲ್ ಫೋನ್, ಬ್ಲೂಟೂತ್, ಕ್ಯಾಲ್ಕುಲೇಟರ್, ಪೆನ್‌ಡ್ರೈವ್, ಇಯರ್ ಫೋನ್, ಮೈಕ್ರೋ ಫೋನ್ ಮತ್ತು ಕೈಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ನಿಷೇಧಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಅಭ್ಯರ್ಥಿಗಳು ಬ್ಲೂಟೂತ್ ಸಾಧನವನ್ನು ಪರೀಕ್ಷಾ ಕೊಠಡಿಯಲ್ಲಿ ಬಳಸುವುದನ್ನು ತಡೆಯುವ ಸಲುವಾಗಿ ತಲೆಯ ಮೇಲೆ ಫುಲ್ ಶರ್ಟ್, ಶೂ, ಟೋಪಿ ಅಥವಾ ಯಾವುದೇ ವಸ್ತ್ರವನ್ನು ಧರಿಸುವುದನ್ನು, ಬಾಯಿ, ಕಿವಿ ಹಾಗೂ ತಲೆ ಮುಚ್ಚುವ ವಸ್ತ್ರವನ್ನು/ ಸಾಧನವನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಜತೆಗೆ ಯಾವುದೇ ರೀತಿಯ ಮಾಸ್ಕ್ ಧರಿಸಿದಂತೆ ನೋಡಿಕೊಳ್ಳಬೇಕು. ಕೆಇಎ ನೀಡಿರುವ ಸೂಚನೆಯನುಸಾರ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಜೀನ್ಸ್ ಪ್ಯಾಂಟ್ ಧರಿಸಿ ಬರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಕೇಂದ್ರ ಪ್ರವೇಶಿಸಲು ಅನುಮತಿಸಬಾರದು. ಮಹಿಳಾ ಅಭ್ಯರ್ಥಿಗಳು ಮಾಂಗಲ್ಯ ಸರ ಹಾಗೂ ಮೂಗುತಿಯನ್ನು ಹೊರತುಪಡಿಸಿ ಇನ್ನಾವುದೇ ಆಭರಣಗಳನ್ನು ಧರಿಸಿರಬಾರದು. ಮೇಲ್ವಿಚಾರಕರು ಎಚ್ಚರವಹಿಸಿ ಪರೀಕ್ಷಾ ನಿಯಮಗಳನ್ನು ಪಾಲಿಸಬೇಕು. ಅಭ್ಯರ್ಥಿ ಒಎಂಆರ್ ನಲ್ಲಿ ನೋಂದಣಿ ಸಂಖ್ಯೆ ಮತ್ತು ವರ್ಷವನ್ನು ಸರಿಯಾಗಿ ಬರೆದು ಶೇಡ್ ಮಾಡಿ ಸಹಿ ಮಾಡಿರುವುದನ್ನು ಖಾತರಿಪಡಿಸಿಕೊಂಡು ಮೇಲ್ವಿಚಾರಕರು ಹಾಗೂ ಅಭ್ಯರ್ಥಿಯು ಸಹಿ ಮಾಡುವಂತೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಚೆಲುವಯ್ಯ, ಜಿಲ್ಲಾ ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ ಇತರರಿದ್ದರು.