ಮೈಸೂರು: ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರ್ಪಡೆಗೊಳಿಸಲು ಸರ್ಕಾರ ಕ್ರಮ ವಹಿಸದೆ ಇದ್ದರೆ ತೀವ್ರ ತರದ ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಮಡಿವಾಳರ ಪರಿಶಿಷ್ಟ ಜಾತಿ ಹೋರಾಟ ಸಮಿತಿ ಅಧ್ಯಕ್ಷ ಎಸ್.ಜೆ. ಪ್ರಶಾಂತ್ ಎಚ್ಚರಿಸಿದರು.
ಆಂಧ್ರಪ್ರದೇಶ, ಕೇರಳ ರಾಜ್ಯದಲ್ಲಿ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಆದರೆ, ರಾಜ್ಯದಲ್ಲಿ ಮಾತ್ರ ಏತಕ್ಕೆ ನಮ್ಮನ್ನು ಎಸಿ ಪಟ್ಟಿಗೆ ಸೇರ್ಪಡೆಗೊಳಿಸಲು ಸರ್ಕಾರ ಹಿಂದೇಟು ಹಾಕುತ್ತಿದೆಯೋ ತಿಳಿಯದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡಲು ಕುಲಶಾಸ್ತ್ರೀಯ ಅಧ್ಯಯನ ನಡೆಸಿ ವರದಿ ನೀಡಲು ಮೈಸೂರು ವಿಶ್ವ ವಿದ್ಯಾಲಯದ ಪ್ರೊ. ಅನ್ನಪೂರ್ಣ ಅವರನ್ನು ನೇಮಕ ಮಾಡಿದ್ದರು. ಪ್ರೊ. ಅನ್ನಪೂರ್ಣ ಸಮಿತಿಯು ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರ್ಪಡೆಗೊಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಈ ವರದಿಗೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿ ಕೇಂದ್ರಕ್ಕೆ ಶಿಫಾರಸು ಮಾಡಬೇಕು. ಆದರೆ, ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಲು ಹಿಂದೇಟು ಹಾಕುತ್ತಿದೆ. ಈ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಸರ್ಕಾರ ಅಧಿಕೃತವಾಗಿ ಹೇಳಿಕೆ ನೀಡಿರುವುದು ಖಂಡನೀಯ ಎಂದರು.