ಚನ್ನರಾಯಪಟ್ಟಣ : ಶಿಕ್ಷಣದಲ್ಲಿ ಸಮಾನತೆ ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು.
ಪಟ್ಟಣದ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಶುಕ್ರವಾರ 1.25 ಕೋಟಿ ರೂ. ವೆಚ್ಚದಲ್ಲಿ ಹೆಚ್ಚುವರಿ 5 ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಪಟ್ಟಣದ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿದೆ. ಪ್ರಥಮ ಹಾಗೂ ದ್ವಿತೀಯ ವರ್ಷದ ಪಿಯುಸಿಯಲ್ಲಿ 1600 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನೂತನವಾಗಿ ಕಂಪ್ಯೂಟರ್ ಲ್ಯಾಬ್ ಅನ್ನು ಸಜ್ಜುಗೊಳಿಸಿದ್ದು, ಮುಂದಿನ ದಿನಗಳಲ್ಲಿ ಉದ್ಘಾಟನೆ ಮಾಡಲಾಗುವುದು. ಕ್ಷೇತ್ರದಲ್ಲಿ ಶೈಕ್ಷಣಿಕ ಗುಣಮಟ್ಟ ಕಾಪಾಡಲು ನಾನಾ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಮಕ್ಕಳ ಗುಣಮಟ್ಟದ ಶಿಕ್ಷಣಕ್ಕಾಗಿ ಸಾಕಷ್ಟು ಅನುದಾನ ಒದಗಿಸಲಾಗಿದೆ. ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿಗೆ ಗುಣಮಟ್ಟದ ಶಿಕ್ಷಣಕ್ಕೆ ಎಲ್ಲ ರೀತಿಯ ಸಹಕಾರ ನೀಡಲಾಗಿದೆ ಎಂದರು.
ತಾಲೂಕಿನಲ್ಲಿ ಪ್ರೌಢಶಾಲೆ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಎಲ್ಲಿಯೂ ಸಹ ಕೊಠಡಿಗಳ ಕೊರತೆ ಇರುವುದಿಲ್ಲ. ಆದರೆ ಪ್ರಾಥಮಿಕ ಶಾಲೆಗಳಿಗೆ ಕೊಠಡಿಗಳ ಕೊರತೆ ಇದ್ದು, ಸರ್ಕಾರದಿಂದ ಕಳೆದ ಸಾಲಿನಲ್ಲಿ 30 ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಸಹಕಾರ ನೀಡಿದೆ. ಪ್ರಸಕ್ತ ಸಾಲಿನಲ್ಲಿ ಹೆಚ್ಚುವರಿಯಾಗಿ 25 ಕೊಠಡಿಗಳ ನಿರ್ಮಾಣಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಲ್ಲಿ ಮನವಿ ಸಲ್ಲಿಸಲಾಗಿದ್ದು, ಅವರು ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪುರಸಭಾ ಅಧ್ಯಕ್ಷ ಕೆ.ಎನ್.ಬನಶಂಕರಿ ರಘು, ಎಪಿಎಂಸಿ ಮಾಜಿ ಅಧ್ಯಕ್ಷ ವಳಗೇರಳ್ಳಿ ಮಂಜುನಾಥ್, ನಿರ್ದೇಶಕ ಅನಿಲ್, ಮುಖಂಡರಾದ ರಘು, ಮರಗೂರು ಪಂಚಾಯತ್ ರಾಜ್ ಇಲಾಖೆಯ ಮುಖ್ಯ ಇಂಜಿನಿಯರ್ ಕೆ.ಎಸ್.ಆನಂದ್, ಕಿರಿಯ ಇಂಜಿನಿಯರ್ ಕಾಶಿನಾಥ್.ಆರ್.ಮಸಳಿ, ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಟಿ.ರಾಮೇಗೌಡ, ಹಿರೀಸಾವೆ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಲೋಕೇಶ್, ಉಪನ್ಯಾಸಕರಾದ ರವಿಕುಮಾರ್, ರಂಗಸ್ವಾಮಿ, ವಾಸು, ದಿಲೀಪ್ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.