ಬೇಲೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನದ ಅಂಗವಾಗಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಎಚ್.ಕೆ.ಸುರೇಶ್, ಭಾರತದ ಸಂವಿಧಾನ ಪೀಠಿಕೆ ಓದುವ ಮೂಲಕ ಸಾವಿರಾರು ವಿದ್ಯಾರ್ಥಿಗಳು, ಉಪನ್ಯಾಸಕರು, ವಿವಿಧ ಇಲಾಖೆ ಅಧಿಕಾರಿಗಳು-ಸಿಬ್ಬಂದಿಗೆ ಪ್ರಮಾಣ ವಚನ ಬೋಧಿಸಿದರು.
ಜಗತ್ತಿನ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿರುವ ನಮ್ಮ ಭಾರತದ ಸಂವಿಧಾನವು ವಿಶ್ವಕ್ಕೆ ಮಾದರಿಯಾಗಿದೆ. ಭಾರತ ದೇಶವು ವಿವಿಧತೆಯಲ್ಲಿ ಏಕತೆ ಸಾರುವ ದೇಶವಾಗಿದ್ದು, ಸಂವಿಧಾನದ ಪೀಠಿಕೆಯಲ್ಲಿಯೇ ಸಂವಿಧಾನದ ವಿಷಯಗಳು ಅಡಕವಾಗಿವೆ. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು ಎಂದರು.
ಭಾರತ ಪ್ರಜಾಪ್ರಭುತ್ವ ದೇಶವಾದ ನಂತರ ದೇಶಕ್ಕೆ ಒಂದು ಸಂವಿಧಾನ ರಚಿಸಬೇಕಿತ್ತು. ಸಂವಿಧಾನ ಕರಡು ಸಮಿತಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಯಿತು. ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶದ ಏಕತೆ ಹಾಗೂ ಸಮಗ್ರತೆಗಾಗಿ ಮತ್ತು ಸಮ ಸಮಾಜ ನಿರ್ಮಾಣಕ್ಕೆ ಸಂವಿಧಾನದಲ್ಲಿ ಒತ್ತು ನೀಡಿದರು. ಈ ನಿಟ್ಟಿನಲ್ಲಿ ಪ್ರಜಾಪ್ರಭುತ್ವವನ್ನು ಉಳಿಸುವ ಮತ್ತು ಜನರಲ್ಲಿ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವುದು ಎಲ್ಲರ ಕರ್ತವ್ಯವಾಗಿದೆ. ಜತೆಗೆ ಸಂವಿಧಾನದ ಮೂಲ ಆಶಯಗಳನ್ನು ಮಕ್ಕಳಿಗೆ ತಿಳಿಸಬೇಕಿದೆ. ಯಾವುದೇ ಸಮುದಾಯ ಅಥವಾ ಧರ್ಮ ಪರಸ್ಪರ ದ್ವೇಷ, ಅಸೂಯೆಗಳಿಗೆ ಅವಕಾಶ ನೀಡದೆ ಸಂವಿಧಾನ ರಕ್ಷಣೆ ಮಾಡವುದು ಎಲ್ಲರ ಕರ್ತವ್ಯವಾಗಿದೆ ಎಂದರು.
ತಹಸೀಲ್ದಾರ್ ಎಂ.ಮಮತಾ, ಪುರಸಭೆ ಅಧ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್, ಸದಸ್ಯ ಜಮಾಲೂದ್ದೀನ್, ತಾಪಂ ಮಾಜಿ ಅಧ್ಯಕ್ಷ ಪರ್ವತಯ್ಯ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಆರ್.ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್, ಬಿಆರ್‌ಸಿ ಶಿವಮರಿಯಪ್ಪ, ಪೊಲೀಸ್ ವೃತ್ತ ನಿರೀಕ್ಷಕ ಶ್ರೀಕಾಂತ್, ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಹರೀಶ್, ತಾಪಂ ಇಒ ದಯಾನಂದ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು