ಮಳವಳ್ಳಿ: ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಪಟ್ಟಣದಲ್ಲಿ ಸೋಮವಾರ ವಕೀಲರ ಸಂಘದಿಂದ ಪ್ರತಿಭಟನೆ ನಡೆಯಿತು.
ನ್ಯಾಯಾಲಯ ಕಲಾಪ ಬಹಿಷ್ಕರಿಸಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಅನಂತರಾಮ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ತಾಲೂಕು ಆಡಳಿತ ಸೌಧದ ಆವರಣದಲ್ಲಿ ಕೆಲಕಾಲ ಧರಣಿ ನಡೆಸಿದರು.
ವಕೀಲರ ಸಂಘದ ಅಧ್ಯಕ್ಷ ಡಿ.ಎಂ.ಸುಂದರ್ ಮಾತನಾಡಿ, ಚಿಕ್ಕಮಗಳೂರಿನ ವಕೀಲ ಪ್ರೀತಮ್ ಅವರು ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಅಲ್ಲಿನ ಪೊಲೀಸರು ಬಂಧಿಸಿ ಹಲ್ಲೆ ನಡೆಸಿದ್ದಾರೆ. ಇದು ಪೊಲೀಸರ ದೌರ್ಜನ್ಯಕ್ಕೆ ಸಾಕ್ಷಿಯಾಗಿದೆ. ಕೂಡಲೇ ಹಲ್ಲೆ ನಡೆಸಿದ ಪೊಲೀಸರನ್ನು ಕರ್ತವ್ಯದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಗ್ರೇಡ್ 2 ತಹಸೀಲ್ದಾರ್ ಬಿ.ವಿ.ಕುಮಾರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಸಂಘದ ಕಾಯದರ್ಶಿ ನಟೇಶ್, ರವೀಂದ್ರ, ಮಲ್ಲಪ್ಪ, ಮುತ್ತುರಾಜ್, ಹೇಮಂತ್, ವಿ.ಪಿ.ನಾಗೇಶ್, ಲಿಂಗರಾಜು, ಹರ್ಷವರ್ಧನ್ ಇತರರಿದ್ದರು.