ಜಿಲ್ಲೆ

ಕೃಷಿಯಂತ್ರ ಮತ್ತು ವಾಹನ ಮೇಳ

ಮಡಿಕೇರಿ:

ಶತಮಾನೋತ್ಸವ ಸಂಭ್ರಮದಲ್ಲಿರುವ ಕೊಡಗು ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ನೀಡುತ್ತಿರುವ ಸೌಲಭ್ಯಗಳನ್ನು ಸದಸ್ಯರು ಸದುಪಯೋಗಪಡಿಸಿಕೊಳ್ಳುವಂತೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರೂ ಆಗಿರುವ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಕರೆ ನೀಡಿದರು. ಕೆಡಿಸಿಸಿ ಬ್ಯಾಂಕ್‌ನ ಶತಮಾನೋತ್ಸವ ಭವನ ಉದ್ಘಾಟನೆ ಹಿನ್ನೆಲೆಯಲ್ಲಿ ಇಲ್ಲಿನ ಗಾಂಧಿ ಮೈದಾನದಲ್ಲಿ ೨ ದಿನಗಳ ಕಾಲ ನಡೆಯುತ್ತಿರುವ ಕೃಷಿಯಂತ್ರ ಮತ್ತು ವಾಹನ ಮೇಳ ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.

ಒಂದು ಸಂಸ್ಥೆ ಶತಮಾನ ಪೂರೈಸಿ ಯಶಸ್ವಿಯಾಗಿ ಮುನ್ನಡೆಯುತ್ತಿರುವುದು ಕಡಿಮೆ ಸಾಧನೆಯೇನೂ ಅಲ್ಲ. ಈ ಸಂದರ್ಭವನ್ನು ಸ್ಮರಣೀಯವಾಗಿಸಲು ಶತಮಾನೋತ್ಸವ ಕಟ್ಟಡ ನಿರ್ಮಾಣ ಮತ್ತು ಅದರ ಉದ್ಘಾಟನೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ವಿನೂತನ ಮತ್ತು ಮಾದರಿ ಕಾರ್ಯಕ್ರಮ ನಡೆಯುತ್ತಿರುವುದು ಶ್ಲಾಘನೀಯ. ಬ್ಯಾಂಕ್ ಸದಸ್ಯರು ಈ ಕಾರ್ಯಕ್ರಮಗಳ ಲಾಭ ಪಡೆದುಕೊಳ್ಳಬೇಕು ಎಂದರು.

ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಮಾತನಾಡಿ ಇಂದಿನ ಆಧುನಿಕ ಕಾಲಘಟದಲ್ಲಿ ಕೃಷಿಗೆ ಕಾರ್ಮಿಕರು ಸಿಗದಂತಹ ವಾತಾವರಣ ನಿರ್ಮಾಣ ಆಗಿದೆ. ಇಂಥ ಸಂದರ್ಭದಲ್ಲಿ ಕೃಷಿಯಲ್ಲಿ ಯಂತ್ರೋಪಕರಣ ಬಳಕೆ ಮೂಲಕ ರೈತರು ಖರ್ಚು ಕಡಿಮೆ ಮಾಡಿಕೊಂಡು ಆದಾಯ ಹೆಚ್ಚಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕೃಷಿಗೆ ಅಗತ್ಯವಿರುವ ಯಂತ್ರಗಳ ಪ್ರದರ್ಶನದ ವ್ಯವಸ್ಥೆಯನ್ನು ಕೆಡಿಸಿಸಿ ಬ್ಯಾಂಕ್ ಮಾಡಿದೆ. ಜತೆಗೆ ಸುಮಾರು ಶೇ. ೭ರಷ್ಟು ರಿಯಾಯಿತಿ ದರದಲ್ಲಿ ಮಾರಾಟವನ್ನೂ ಮಾಡುತ್ತಿರುವ ಮೂಲಕ ಕೃಷಿಕರಿಗೆ ಅನುಕೂಲ ಕಲ್ಪಿಸಿದೆ ಎಂದು ಹೇಳಿದರು.

ವಿಧಾನಪರಿಷತ್ತು ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ಮಾತನಾಡಿ ಸ್ವಾತಂತ್ರ್ಯಪೂರ್ವದಲ್ಲಿ ಆರಂಭವಾದ ಬ್ಯಾಂಕ್ ಉತ್ತಮವಾಗಿ ಕೆಲಸ ಮಾಡುತ್ತಿದೆ. ಜಿಲ್ಲೆಯ ರೈತರು, ಕಾಫಿ ಬೆಳೆಗಾರರ ಅವಶ್ಯಕತೆಗಳಿಗೆ ಅನುಗುಣವಾಗಿ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಮಾದರಿಯಾಗಿದೆ ಎಂದರು.
ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ಮಾತನಾಡಿ ಶತಮಾನೋತ್ಸವ ಭವನ ಉದ್ಘಾಟನೆಯ ಸಂಭ್ರಮದಲ್ಲಿ ಸದಸ್ಯರಿಗೆ ಬ್ಯಾಂಕ್ ವತಿಯಿಂದ ನೀಡಲಾಗುತ್ತಿರು ಸೌಲಭ್ಯಗಳ ಮಾಹಿತಿ ನೀಡಿದರು.

ಕೊಡ್ಲಿಪೇಟೆ ಮಠದ ಶ್ರೀ ಮಹಾಂತ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದ ವೇದಿಕೆಯಲ್ಲಿ ಮಡಿಕೇರಿ ನಗರ ಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಕೆಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ ಇದ್ದರು. ಇದೇ ಸಂದರ್ಭದಲ್ಲಿ ಹುಂಡೈ ಸಂಸ್ಥೆಯ ನೂತನ ಕಾರನ್ನು ಅನಾವರಣಗೊಳಿಸಲಾಯಿತು.