ಶಿವಮೊಗ್ಗ: ಹದಿಮೂರು ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಲಯದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-2(ಪೋಕ್ಸೊ)ರ ನ್ಯಾಯಾಧೀಶರು 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 60 ಸಾವಿರ ರೂ. ದಂಡ ವಿಧಿಸಿದ್ದಾರೆ.
ಆಗುಂಬೆ ಸಮೀಪದ ಗ್ರಾಮವೊಂದರ ಎಂ.ಎಚ್.ಮೊಹಮ್ಮದ್ ಮಕ್ಸೂದ್(23) ಶಿಕ್ಷೆಗೆ ಒಳಗಾದವ. ಈತ 2021ರ ಜೂ.29ರಂದು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಆಗುಂಬೆ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಅಂದಿನ ತನಿಖಾಧಿಕಾರಿಯಾಗಿದ್ದ ತೀರ್ಥಹಳ್ಳಿಯ ಸಿಪಿಐ ಪ್ರವೀಣ್ ನೀಲಮ್ಮನವರ್, ಮಕ್ಸೂದ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಈ ಬಗ್ಗೆ ಬುಧವಾರ ವಿಚಾರಣೆ ನಡೆಸಿದ ನ್ಯಾಯಾಧೀಶ ಜೆ.ಎಸ್.ಮೋಹನ್‌ಕುಮಾರ್ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಮೊಹಮ್ಮದ್ ಮಕ್ಸೂದ್‌ಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 60 ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿಯಾಗಿ 6 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ನೀಡಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ಅವರು ವಾದ ಮಂಡಿಸಿದ್ದರು.