ಹಾವೇರಿ: ವಿದ್ಯುತ್ ಖಾಸಗೀಕರಣ ಕೈಬಿಡುವುದು, ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವುದು, ಬೆಳೆ ನಷ್ಟ ಪರಿಹಾರ, ಬೆಳೆ ವಿಮೆ ಮಂಜೂರು, ರೈತರ ಸಾಲ ಮನ್ನಾ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆ. 26ರಂದು ಜಿಲ್ಲಾಡಳಿತ ಭವನದ ಎದುರು ಅನಿರ್ದಿಷ್ಟಾವಧಿವರೆಗೆ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ರೈತ ಸಂಘ ಹಾಗೂ ಹಸಿರುಸೇನೆ ಅಧ್ಯಕ್ಷ ರಾಮಣ್ಣ ಕೆಂಚಳ್ಳೇರ ಹೇಳಿದರು.
ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಮಳೆಯಿಂದ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಹಾನಿಯಾಗಿದೆ. 3.30 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಭೂಮಿಯಲ್ಲಿ ಬಿತ್ತನೆಯಾಗಿದ್ದು, ಮೆಕ್ಕೆಜೋಳ, ಹತ್ತಿ, ಸೋಯಾಬೀನ್, ಶೇಂಗಾ ಬೆಳೆ ಸಂಪೂರ್ಣ ನಾಶವಾಗಿದೆ. ಕೃಷಿ ಇಲಾಖೆ ಪಾರದರ್ಶಕತೆಯಿಂದ ಸಮೀಕ್ಷೆ ನಡೆಸದೇ ಕೇವಲ 66 ಸಾವಿರ ಹೆಕ್ಟೇರ್ ಪ್ರದೇಶ ನಷ್ಟವಾಗಿದೆ ಎಂದು ವರದಿ ಸಿದ್ಧಪಡಿಸಿದ್ದಾರೆ. ಅಧಿಕಾರಿಗಳು ಮಾಡಿರುವ ಎಡವಟ್ಟಿನಿಂದಾಗಿ ಭೂಮಿಯನ್ನು ನಂಬಿ ದುಡಿಯುವ ರೈತರ ಬದುಕು ಬೀದಿಪಾಲಾಗಿದೆ. ಕೂಡಲೇ ಮರು ಸಮೀಕ್ಷೆ ಮಾಡಿ ಸರ್ಕಾರಕ್ಕೆ ಸರಿಯಾದ ವರದಿ ಸಲ್ಲಿಸಬೇಕು. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಸೇರಿ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರ ವಿದ್ಯುತ್ ಖಾಸಗೀಕರಣ ಮಾಡಿದೆ. ರಾಜ್ಯ ಸರ್ಕಾರವೂ ಇದೇ ನೀತಿ ಅನುಸರಿಸುತ್ತಿದೆ. ಇದರ ಪರಿಣಾಮ ಜಿಲ್ಲೆಯ 2 ಲಕ್ಷ ಪಂಪ್ ಸೆಟ್ ಬಳಕೆದಾರರು ಬೀದಿ ಪಾಲಾಗುವುದರಲ್ಲಿ ಸಂದೇಹವೇ ಇಲ್ಲ, ಹೀಗಾಗಿ ಈ ನಿರ್ಧಾರವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯನ್ನು ಅತಿವೃಷ್ಟಿ ಜಿಲ್ಲೆಯೆಂದು ಘೊಷಣೆ ಮಾಡಬೇಕು. ಮನೆ ಕಳೆದುಕೊಂಡವರಿಗೆ ಹಾಗೂ ಜಾನುವಾರು ಪ್ರಾಣ ಹಾನಿಯಾಗಿದ್ದು, ಕೂಡಲೇ ಪರಿಹಾರ ಕೊಡಬೇಕು. ಬ್ಯಾಂಕ್ಗಳು ರೈತರ ಕೃಷಿ ಸಾಲವನ್ನು ಬಲವಂತವಾಗಿ ವಸೂಲಿ ಮಾಡುವುದನ್ನು ನಿಲ್ಲಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟ ನಡೆಸುತ್ತೇವೆ ಎಂದರು.
ಸಂಘಟನೆಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ಬಾಕಿ ಉಳಿದಿದ್ದ 16 ಕೋಟಿ ರೂ. ರೈತರ ಬೆಳೆ ವಿಮೆ ಈಗ ಬಿಡುಗಡೆಯಾಗಿರುವುದು ಸ್ವಾಗತಾರ್ಹ. ಆದರೆ, ಇದಕ್ಕೆ ಬಡ್ಡಿ ಸೇರಿಸಿ ರೈತರಿಗೆ ಜಮಾ ಮಾಡಬೇಕು. 2015-16ರಲ್ಲಿನ 6.25 ಕೋಟಿ, 2016-17ರ ಹಿಂಗಾರು ಹಂಗಾಮಿನ 3 ಕೋಟಿ ರೂ. ಬೆಳೆ ವಿಮೆ ಹಣ ಬರೋದು ಬಾಕಿಯಿದೆ. ಕೂಡಲೇ ಇದನ್ನೂ ಬಿಡುಗಡೆ ಮಾಡುವ ಕೆಲಸವಾಗಬೇಕು ಎಂದು ಒತ್ತಾಯಿಸಿದರು.