ಹನೂರು: ನರೇಗಾ ಯೋಜನೆಯಡಿ ಉದ್ಯೋಗ ನೀಡುವಂತೆ ತಾಲೂಕಿನ ಗಡಿ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮಸ್ಥರು ಶನಿವಾರ ಒತ್ತಾಯಿಸಿದರು.
ಗ್ರಾಮದ ವೆಂಕಟಲಕ್ಷ್ಮಮ್ಮ ಮಾತನಾಡಿ, ಇಲ್ಲಿನ ಜನರು ನೆಲೆನಿಂತು ಹಲವು ದಶಕಗಳೇ ಕಳೆದಿವೆ. ಆದರೆ ಸಮರ್ಪಕ ರಸ್ತೆ, ಕುಡಿಯುವ ನೀರು ಸೇರಿದಂತೆ ಇನ್ನಿತರೆ ಅಗತ್ಯ ಮೂಲ ಸೌಕರ್ಯಗಳ ಕೊರತೆ ಇದೆ. ಈ ನಡುವೆಯೂ ಹೆಚ್ಚು ಕೂಲಿಯನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದೇವೆ. ಅಗತ್ಯ ಮೂಲ ಸೌಕರ್ಯವನ್ನು ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಜತೆಗೆ ಕಳೆದ 2 ವರ್ಷದಿಂದಲೂ ಗ್ರಾಪಂ ವತಿಯಿಂದ ನರೇಗಾ ಯೋಜನೆಯಡಿ ಉದ್ಯೋಗ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಲ್ಲಿ ಮನವಿ ಮಾಡಲಾಗಿದೆ. ಆದರೆ ಅಧಿಕಾರಿಗಳು ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ. ಕಳೆದ ತಿಂಗಳು ಸದಸ್ಯರೊಂದಿಗೆ ಗ್ರಾಪಂ ಕಚೇರಿಗೆ ತೆರಳಿ ಉದ್ಯೋಗ ನೀಡುವಂತೆ ಪಿಡಿಒ ಅವರಲ್ಲಿ ಮನವಿ ಮಾಡಲಾಗಿತ್ತು. ಈ ವೇಳೆ 15 ದಿನದ ಒಳಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಈವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ತುಂಬ ತೊಂದರೆ ಅನುಭವಿಸುತ್ತಿದ್ದೇವೆ. ಆದ್ದರಿಂದ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಉದ್ಯೋಗ ನೀಡುವುದರ ಮೂಲಕ ಜೀವನ ನಡೆಸಲು ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.